ಬೆಂಗಳೂರು: ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆ ಗೊಂದಲಕ್ಕೆ ಕಾರಣವಾಗಿದ್ದು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ SIR ಪ್ರಕ್ರಿಯೆ ಪೂರ್ಣಗೊಳಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ, ಕೆಲವರಿಗೆ ‘ನಿಮ್ಮ ವೋಟರ್ ಐಡಿ ಕ್ಯಾನ್ಸಲ್ ಆಗಿದೆ’ ಎಂದು ನೋಟಿಸ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ ಸೇರಿದಂತೆ ಹಲವು ಅಧಿಕೃತ ದಾಖಲೆಗಳನ್ನು ತೋರಿಸಿದರೂ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಇನ್ನು 71 ವರ್ಷದ ಹಿರಿಯ ನಾಗರಿಕರಿಗೂ ಮಾರ್ಕ್ಸ್ ಕಾರ್ಡ್ ಹಾಗೂ ಜನ್ಮ ಪ್ರಮಾಣಪತ್ರ ತರುವಂತೆ ಅಧಿಕಾರಿಗಳು ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ವಯಸ್ಸಿನಲ್ಲಿ ಇಂತಹ ದಾಖಲೆಗಳನ್ನು ಎಲ್ಲಿಂದ ತರಬೇಕು ಎಂದು ಹಿರಿಯ ನಾಗರಿಕರು ಪ್ರಶ್ನಿಸಿದ್ದಾರೆ.
ಮತ್ತೊಂದೆಡೆ, ಕರ್ನಾಟಕದಲ್ಲೇ ಹುಟ್ಟಿ ಬೆಳೆದಿದ್ದರೂ ತಮ್ಮ ವಿಳಾಸ ತಮಿಳುನಾಡಿಗೆ ಬದಲಾಗಿದೆ ಎಂದು ಬಿಎಲ್‌ಒ ಹಾಗೂ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಮತ್ತೊಬ್ಬ ನಿವಾಸಿ ಆರೋಪಿಸಿದ್ದಾರೆ. ಅಧಿಕಾರಿಗಳ ತಪ್ಪಿನಿಂದ ಈ ಸಮಸ್ಯೆ ಉಂಟಾಗಿದ್ದು, ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ವಿದೇಶದಲ್ಲಿರುವವರಿಗೆ ಸಹ ಸೂಕ್ತ ಕಾಲಾವಕಾಶ ನೀಡದೆ ನಿಗದಿತ ಸಮಯದಲ್ಲೇ SIR ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳು ಹಾಗೂ ಬಿಎಲ್‌ಒಗಳ ತಪ್ಪಿಗೆ ಸಾರ್ವಜನಿಕರು ಏಕೆ ತೊಂದರೆ ಅನುಭವಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಅಡಿಷನಲ್ ಎಇಆರ್‌ಒ ನಾರಾಯಣಪ್ಪ ಹಾಗೂ ಸ್ಥಳೀಯ ಅಧಿಕಾರಿಗಳನ್ನು ಗ್ರಾಮಸ್ಥರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು. ಸರ್ಕಾರ ನೀಡಿರುವ ಅಧಿಕೃತ ದಾಖಲೆಗಳನ್ನು ಪರಿಗಣಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮತದಾನದ ಹಕ್ಕೇ ಬೇಡ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.



