HomeKarnataka Newsರಸ್ತೆಯಲ್ಲೇ ಮರಳು, ಕಲ್ಲು ಹಾಕಿ ಸಾರ್ವಜನಿಕರಿಗೆ ತೊಂದರೆ: ಮನೆ ಕಟ್ಟುವ ವ್ಯಕ್ತಿಗೆ ಹೈಕೋರ್ಟ್ ತರಾಟೆ

ರಸ್ತೆಯಲ್ಲೇ ಮರಳು, ಕಲ್ಲು ಹಾಕಿ ಸಾರ್ವಜನಿಕರಿಗೆ ತೊಂದರೆ: ಮನೆ ಕಟ್ಟುವ ವ್ಯಕ್ತಿಗೆ ಹೈಕೋರ್ಟ್ ತರಾಟೆ

For Dai;y Updates Join Our whatsapp Group

ಬೆಂಗಳೂರು: ಮನೆ ನಿರ್ಮಾಣ ಮಾಡುವ ನೆಪದಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಮರಳು, ಎಂ-ಸ್ಯಾಂಡ್‌, ಇಟ್ಟಿಗೆ ಹಾಗೂ ಕಲ್ಲು ಸೇರಿದಂತೆ ನಿರ್ಮಾಣ ಸಾಮಗ್ರಿಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಹಾಗೂ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಲು ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ದೇವನಹಳ್ಳಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ವಿರುದ್ಧದ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಎಂ-ಸ್ಯಾಂಡ್‌, ಕಲ್ಲು ಸೇರಿದಂತೆ ಹಲವು ನಿರ್ಮಾಣ ಸಾಮಗ್ರಿಗಳನ್ನು ಸಾರ್ವಜನಿಕ ರಸ್ತೆಯಲ್ಲಿ ಹಾಕಿರುವ ಆರೋಪವಿದೆ. ಸ್ಥಳೀಯ ಅಧಿಕಾರಿಗಳು ಅವುಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರೂ ಪದೇಪದೆ ರಸ್ತೆಯಲ್ಲೇ ನಿರ್ಮಾಣ ಸಾಮಗ್ರಿಗಳನ್ನು ಹಾಕಲಾಗಿದೆ ಎಂದು ಪ್ರಶ್ನಿಸಿದರು.

“ಏಕೆ ಮರಳು, ಕಲ್ಲುಗಳನ್ನು ರಸ್ತೆಯ ಮೇಲೆ ಹಾಕಿದ್ದೀರಿ? ಜನರು ರಸ್ತೆಯಲ್ಲಿ ಓಡಾಡಬಾರದೇ? ರಸ್ತೆ ಇರುವುದು ಮನೆ ಕಟ್ಟುವ ಸಾಮಗ್ರಿಗಳನ್ನು ಹಾಕುವುದಕ್ಕಾಗಿಯೇ? ಸಾರ್ವಜನಿಕರಿಗೆ ಏಕೆ ತೊಂದರೆ ಕೊಟ್ಟಿದ್ದೀರಿ?” ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಅಷ್ಟೇ ಅಲ್ಲದೆ, ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ಬಳಸುತ್ತಿರುವುದಕ್ಕೆ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ರಸ್ತೆಯಲ್ಲಿ ಮರಳು, ಕಲ್ಲು ಹಾಕಿ ರಾಜ್ಯಭಾರ ಮಾಡುತ್ತಿದ್ದೀರಾ? ನೀವೇನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೀರೋ ಅಥವಾ ರಾಜರ ಕಾಲದಲ್ಲಿದ್ದೀರೋ?” ಎಂದು ತೀಕ್ಷ್ಣವಾಗಿ ಪ್ರಶ್ನಿಸುವ ಮೂಲಕ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡರು.

ತಪ್ಪು ಮಾಡಿದ ಬಳಿಕ ಹೈಕೋರ್ಟ್‌ಗೆ ಬಂದು ಪ್ರಕರಣ ರದ್ದುಪಡಿಸುವಂತೆ ಕೋರುತ್ತಿದ್ದೀರಿ. ಅರ್ಜಿಯನ್ನು ಹಿಂಪಡೆಯುತ್ತೀರೋ ಅಥವಾ ಪ್ರಕರಣದ ಅರ್ಹತೆಯ ಆಧಾರದ ಮೇಲೆ ತೀರ್ಪು ನೀಡಬೇಕೋ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಅಲ್ಲದೆ, ಪ್ರಕರಣದ ಕುರಿತು ತೀರ್ಪು ನೀಡಿದರೆ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರು ಸಂಕಷ್ಟ ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರ ಪರ ವಕೀಲರು ಕೆಲಕಾಲ ವಾದ ಮಂಡಿಸಿದ ಬಳಿಕ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಅರ್ಜಿ ಹಿಂಪಡೆಯಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ತಮ್ಮ ಎಲ್ಲ ವಾದಾಂಶಗಳನ್ನು ವಿಚಾರಣಾ ನ್ಯಾಯಾಲಯದ ಮುಂದೆ ಮಂಡಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img