HomeKarnataka News37 ವರ್ಷಗಳ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆ: ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಅಸ್ತು

37 ವರ್ಷಗಳ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆ: ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಅಸ್ತು

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 37 ವರ್ಷಗಳ ಬಳಿಕ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಮರುಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲು ಅನುಮೋದನೆ ನೀಡಲಾಗಿದೆ.

ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಹಾಗೂ ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಆ ನಿಷೇಧವನ್ನು ತೆರವುಗೊಳಿಸಿ ಚುನಾವಣೆಗಳನ್ನು ಮರುಜಾರಿಗೊಳಿಸಲು ಮುಂದಾಗಿದೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಆದರೆ, ಚುನಾವಣೆ ನಡೆಸಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ಆಯಾ ಕಾಲೇಜುಗಳ ಆಡಳಿತ ಮಂಡಳಿಗೆ ಬಿಡಲಾಗಿದೆ.

ವಿದ್ಯಾರ್ಥಿ ಸಂಘದಲ್ಲಿ ಓರ್ವ ಅಧ್ಯಕ್ಷ ಹಾಗೂ ಓರ್ವ ಮಹಿಳೆ ಸೇರಿದಂತೆ ಇಬ್ಬರು ಉಪಾಧ್ಯಕ್ಷರು ಇರಲಿದ್ದಾರೆ. ಇದರ ಜೊತೆಗೆ ಓರ್ವ ಕಾರ್ಯದರ್ಶಿ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಜಂಟಿ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ. ಒಂದು ವೇಳೆ ಕಾಲೇಜಿನ ವಿದ್ಯಾರ್ಥಿಗಳೇ ಚುನಾವಣೆ ಬೇಡ ಎಂದು ನಿರ್ಧರಿಸಿದರೆ, ಅಂತಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯುವುದಿಲ್ಲ.

ಇನ್ನು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಸೇರಿದ ವಿದ್ಯಾರ್ಥಿ ಸಂಘಟನೆಗಳಿಗೆ ಅವಕಾಶ ಇರುವುದಿಲ್ಲ. ಅಂದರೆ, ರಾಜಕೀಯ ಪಕ್ಷಗಳ ನೇರ ಹಸ್ತಕ್ಷೇಪವಿಲ್ಲದೆ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ವರ್ಷದ ಜೂನ್‌ನಲ್ಲಿ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ನಿಲ್ಲಿಸಲಾಗಿರುವ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಈ ವರ್ಷದಿಂದಲೇ ಆರಂಭಿಸಲಾಗುವುದು ಎಂದು ಘೋಷಿಸಿದ್ದರು.

ಇದೀಗ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೆ ಒಪ್ಪಿಗೆ ನೀಡಿರುವುದರಿಂದ, ರಾಜ್ಯದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ಹಲವು ವರ್ಷಗಳ ಬಳಿಕ ವಿದ್ಯಾರ್ಥಿ ನಾಯಕತ್ವದ ಚುನಾವಣಾ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img