ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಎಪಿಎಂಸಿ ಯಾರ್ಡ್ ರಸ್ತೆಯಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ಹಾಗೂ ಗೋದಾಮು ನಿರ್ಮಾಣ ಕಾಮಗಾರಿಗೆ ಮಾಜಿ ಸಚಿವ ಎಚ್.ಕೆ. ಪಾಟೀಲ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕೃಷಿ ಇಲಾಖೆಯ 2025-26ನೇ ಸಾಲಿನ RIDF ಬ್ರ್ಯಾಂಡ್-31ರ ಸಬ್ಸಿಡಿ ಯೋಜನೆಯಡಿ ಅಂದಾಜು ₹2 ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗಲಿದೆ. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಯಾವುದೇ ರಾಜಿ ಮಾಡಿಕೊಳ್ಳದೆ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಎಚ್.ಕೆ. ಪಾಟೀಲ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು.
ರೈತ ಸಂಪರ್ಕ ಕೇಂದ್ರದ ಮೂಲಕ ರೈತರಿಗೆ ಅಗತ್ಯವಿರುವ ಕೃಷಿ ಮಾಹಿತಿಯ ಜತೆಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಾಗಲಿದೆ. ಅಲ್ಲದೆ, ರೈತರು ಬೆಳೆದ ಧಾನ್ಯಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಗೋದಾಮಿನ ಸೌಲಭ್ಯವೂ ದೊರೆಯಲಿದೆ. ಈ ಯೋಜನೆಯಿಂದ ಗದಗ ಭಾಗದ ಕೃಷಿ ವಲಯದ ಪ್ರಗತಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಸುಟಿ, ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೋರವಣ್ಣವರ, ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, ಪರಮೇಶ್ವರಪ್ಪ ಜಂತ್ಲಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜಿನಗ, ಗದಗ-ಬೆಟಗೇರಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಬಸವರಾಜೇಶ್ವರಿ, ಸಜ್ಜನ, ಸಂಜೀವರೆಡ್ಡಿ, ಶಿವು ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.



