ಹಾಸನ: ಜಾನುವಾರು ಮೈತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಹೊಳೆನರಸೀಪುರ ತಾಲೂಕಿನ ಬಂಡಿಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಕೆಂಗೇಗೌಡ (60) ಹಾಗೂ ಕುಮಾರ (30) ಎಂದು ಗುರುತಿಸಲಾಗಿದೆ. ಕೆಂಗೇಗೌಡ ಅವರು ಕೆರೆಯಲ್ಲಿ ಮುಳುಗುತ್ತಿದ್ದ ವೇಳೆ ಅವರನ್ನು ರಕ್ಷಿಸಲು ಕುಮಾರ ತೆರಳಿದ್ದರು ಎನ್ನಲಾಗಿದೆ. ಆದರೆ ಇಬ್ಬರೂ ಕೆರೆಯಿಂದ ಹೊರಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಇಬ್ಬರೂ ಬೆಳಗ್ಗೆ 11 ಗಂಟೆ ಸುಮಾರಿಗೆ ಕೆರೆ ಬಳಿ ತೆರಳಿದ್ದರು ಎನ್ನಲಾಗಿದೆ. ಘಟನೆ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಶವಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



