ಕೋಲಾರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಗಳು ಎದುರಾಗಿವೆ.
ಮಳೆ ನೀರು ಜನರಲ್ ವಾರ್ಡ್‌ಗೆ ನುಗ್ಗಿದ ಪರಿಣಾಮ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಆಸ್ಪತ್ರೆಯ ವಾರ್ಡ್‌ನಲ್ಲಿ ನೀರು ತುಂಬಿಕೊಂಡಿದ್ದರಿಂದ ಅಲ್ಲಿದ್ದ ಹಾಸಿಗೆಗಳು ನೆನೆದಿವೆ. ಇದರಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದು, ನೀರು ತೆರವುಗೊಳಿಸಲು ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರು ಹರಸಾಹಸಪಟ್ಟಿದ್ದಾರೆ.
ಕೋಲಾರ ಜಿಲ್ಲಾಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಮಳೆ ಬಂದ ಸಂದರ್ಭದಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುವ ಸಮಸ್ಯೆ ಪದೇಪದೇ ಎದುರಾಗುತ್ತಿದೆ ಎನ್ನಲಾಗಿದೆ. ಮೂಲಸೌಕರ್ಯಗಳ ಕೊರತೆಯಿಂದ ರೋಗಿಗಳು ಹಾಗೂ ಅವರ ಕುಟುಂಬಸ್ಥರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿ ಮಳೆಗಾಲದಲ್ಲೂ ಸಮಸ್ಯೆ ಮರುಕಳಿಸುತ್ತಿದ್ದರೂ ಶಾಶ್ವತ ಪರಿಹಾರ ಕೈಗೊಳ್ಳದಿರುವುದಕ್ಕೆ ರೋಗಿಗಳು ಹಾಗೂ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಮೂಲಸೌಕರ್ಯ ಸುಧಾರಿಸಿ, ಮಳೆ ನೀರು ವಾರ್ಡ್‌ಗಳಿಗೆ ನುಗ್ಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.



