ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ವರಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ರಾಜೇಶ್ವರಿ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಖಾದ್ರಿ ಚೌಕ್ನಲ್ಲಿರುವ ಅವರ ಮತ್ತೊಂದು ಮನೆ ಮೇಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆ, ಜೆಸ್ಕಾಂ ಕಚೇರಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಒಟ್ಟು ಎರಡು ಮನೆಗಳು ಹಾಗೂ ಕಚೇರಿ ಸೇರಿದಂತೆ ಮೂರು ಕಡೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆದಿದೆ.
ರಾಜೇಶ್ವರಿ ಅವರು ಬೆಳಗ್ಗೆ ವಾಕಿಂಗ್ಗೆ ತೆರಳಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮನೆಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಸದ್ಯ ಲೋಕಾಯುಕ್ತ ಅಧಿಕಾರಿಗಳು ಆಸ್ತಿ ಹಾಗೂ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.



