ಏಷ್ಯನ್ ಗೇಮ್ಸ್ ಟಿ20 ಟೂರ್ನಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 124 ರನ್‌ಗಳಿಂದ ಮಣಿಸಿದ ಭಾರತ, ಇದೀಗ ಫೈನಲ್‌ಗೆ ಪ್ರವೇಶಿಸಿದೆ. ಚಿನ್ನದ ಪದಕಕ್ಕಾಗಿ ನಡೆಯಲಿರುವ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಲಿದೆ.
ಜಪಾನ್‌ನ ನಿಶ್ಶಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ಸಹನ್ ಅರಾಚ್ಚಿಗೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡಿತು.
ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ತಲಾ 7 ರನ್ ಗಳಿಸಿ ಔಟಾದರು. ಆದರೆ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳೊಂದಿಗೆ 38 ರನ್ ಸಿಡಿಸಿ ತಂಡಕ್ಕೆ ಉತ್ತಮ ಕೊಡುಗೆ ನೀಡಿದರು. ನಾಯಕ ಶ್ರೇಯಸ್ ಅಯ್ಯರ್ 13 ಎಸೆತಗಳಲ್ಲಿ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಇಶಾನ್ ಕಿಶನ್ ಭಾರತದ ಇನಿಂಗ್ಸ್‌ಗೆ ಆಸರೆಯಾದರು. ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಇಶಾನ್, ಕೊನೆಯವರೆಗೂ ಅಬ್ಬರಿಸಿದರು. ಅವರು 46 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ ಅಜೇಯ 80 ರನ್ ಗಳಿಸಿದರು.
ಇಶಾನ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು. ಶ್ರೀಲಂಕಾ ಗೆಲ್ಲಲು 170 ರನ್‌ಗಳ ಗುರಿ ನಿಗದಿಯಾಯಿತು.
ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭದಲ್ಲೇ ಜಸ್‌ಪ್ರೀತ್ ಬುಮ್ರಾ ಶಾಕ್ ನೀಡಿದರು. ಮೊದಲ ಓವರ್‌ನಲ್ಲೇ ಬುಮ್ರಾ ಎರಡು ವಿಕೆಟ್ ಕಬಳಿಸಿ ಲಂಕಾ ಬ್ಯಾಟಿಂಗ್ ಪಡೆಯನ್ನು ಒತ್ತಡಕ್ಕೆ ಸಿಲುಕಿಸಿದರು. ಬಳಿಕ ಅಕ್ಷರ್ ಪಟೇಲ್ ಕೂಡ ಎರಡು ವಿಕೆಟ್ ಪಡೆದು ಮಿಂಚಿದರು. ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಕಬಳಿಸಿದರು.
ಟೀಮ್ ಇಂಡಿಯಾ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿದ ಶ್ರೀಲಂಕಾ 6.2 ಓವರ್‌ಗಳಲ್ಲಿ ಕೇವಲ 33 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಲಂಕಾ ತಂಡ 9.5 ಓವರ್‌ಗಳಲ್ಲಿ 45 ರನ್‌ಗಳಿಗೆ ಆಲೌಟ್ ಆಯಿತು.
ಈ ಮೂಲಕ ಭಾರತ 124 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಇದೀಗ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಗೆಲ್ಲುವ ತಂಡ ಚಿನ್ನದ ಪದಕ ಹಾಗೂ ಸೋಲುವ ತಂಡ ಬೆಳ್ಳಿ ಪದಕ ಪಡೆಯಲಿದೆ.



