ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ರಜೆ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಾಶಯದಲ್ಲಿ ಮುಳುಗಿ ತಾಯಿ ಹಾಗೂ ಮಗ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಮೃತರನ್ನು ರೇಖಾ (39) ಹಾಗೂ ಹೇಮಂತ್ (19) ಎಂದು ಗುರುತಿಸಲಾಗಿದೆ. ಇದೇ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ತಂದೆ ರಾಜು ಹಾಗೂ ಮಗಳು ದೀಪ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಆಟೋ ಚಾಲಕರಾಗಿರುವ ರಾಜು, ಮಕ್ಕಳಿಗೆ ಗಾಂಧಿ ಜಯಂತಿ ರಜೆ ಇದ್ದ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಶ್ರೀನಿವಾಸ ಸಾಗರ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕುಟುಂಬದ ಸದಸ್ಯರು ಜಲಾಶಯದ ನೀರಿನಲ್ಲಿ ಆಟವಾಡಲು ಇಳಿದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗಿದ್ದ ರೇಖಾ ಹಾಗೂ ಹೇಮಂತ್ ಅವರ ಮೃತದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



