ಹಿರಿಯೂರು: ಚಲಿಸುತ್ತಿದ್ದ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.
ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ವಾಲಿದೆ.
ಈ ವೇಳೆ ಲಾರಿಯ ಹಿಂದೆಯೇ ಬರುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕನಿಗೆ ವಾಹನ ನಿಯಂತ್ರಿಸಲು ಸಾಧ್ಯವಾಗದೆ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕುಷ್ಟಗಿ ತಾಲೂಕಿನ ಮೂಲದ ಶಶಿಧರ್ (22) ಮತ್ತು ಮಂಜುನಾಥ್ (22) ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್ (21) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮತ್ತಿಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



