ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್ಗೆ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಬೀದರ್ ತಾಲೂಕಿನ ಯರನಳ್ಳಿ ಗ್ರಾಮದ ಸಾಯಿಕಿರಣ ಜೀತಪ್ಪ ಜೋಶಿ (25) ಮತ್ತು ನಾಗೇಶ್ ಮಾಣಿಪ್ಪ ಅಣ್ಣಾ (24) ಎಂದು ಗುರುತಿಸಲಾಗಿದೆ. ಇಬ್ಬರೂ ಸ್ನೇಹಿತರಾಗಿದ್ದು, ಬೆಂಗಳೂರಿಗೆ ತೆರಳಿ ಹೊಸ ಬೈಕ್ ಖರೀದಿಸಿಕೊಂಡು ಬೀದರ್ಗೆ ಮರಳುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಸಂಗಾರೆಡ್ಡಿಯ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರು ಯುವಕರು ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಗಾರೆಡ್ಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಳಿ ಇದ್ದ ದಾಖಲೆಗಳನ್ನು ಪರಿಶೀಲಿಸಿದಾಗ ಅವರು ಬೀದರ್ ಮೂಲದವರು ಎಂಬುದು ಪೊಲೀಸರಿಗೆ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂಗಾರೆಡ್ಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿ ಹಾಗೂ ಚಾಲಕನ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.



