ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದ ಘಟನೆ ನಡೆದಿದೆ.
ಕನಕಪುರ ರಸ್ತೆ ಟೋಲ್ನಿಂದ ಅಂಜನಾಪುರ ಕಡೆಗೆ ತೆರಳುವ ಮಾರ್ಗದಲ್ಲಿ ಟ್ಯಾಂಕರ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಜ್ವಾಲೆಗಳು ಬಾನೆತ್ತರಕ್ಕೆ ಚಿಮ್ಮಿವೆ.
ಘಟನೆ ತಿಳಿಯುತ್ತಿದ್ದಂತೆ ತಲಘಟ್ಟಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ಬೆಂಕಿ ನಿಯಂತ್ರಣಕ್ಕೆ ತರಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಸುಮಾರು ಒಂದೂವರೆ ಗಂಟೆಯಿಂದ ಟ್ಯಾಂಕರ್ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಕನಿಷ್ಠ ನಾಲ್ಕು ಕಿಲೋಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹಬ್ಬದ ಪ್ರಯಾಣಕ್ಕೆ ಹೊರಟಿದ್ದ ವಾಹನ ಸವಾರರು ಪರದಾಡುವಂತಾಗಿದೆ.
ಟ್ಯಾಂಕರ್ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ.



