ಬೆಂಗಳೂರು: ವಿಮಾನಕ್ಕೆ ಹಕ್ಕಿ ಡಿಕ್ಕಿಯಾದ ಪರಿಣಾಮ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಏರ್ ಇಂಡಿಯಾ ವಿಮಾನವೊಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.
ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಇದರಿಂದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನದಲ್ಲಿ ಒಟ್ಟು 148 ಪ್ರಯಾಣಿಕರಿದ್ದರು. ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಅನಾಹುತ ಸಂಭವಿಸದ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.



