ಬೆಂಗಳೂರು;- ಬಿಜೆಪಿ ಷಡ್ಯಂತ್ರಕ್ಕೆ ಉತ್ತರ ಕೊಡುವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ ಕುರಿತಂತೆ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇ. 90 ರಷ್ಟು ತನಿಖೆ ಪೂರ್ಣಗೊಳಿಸಿದ್ದೇವೆ ಎಂದು ಸಿಬಿಐ ಹೇಳಿದೆ. ಆದರೆ, ನನ್ನದು ಹಾಗೂ ನನ್ನ ಕುಟುಂಬದವರ ಆಸ್ತಿ ಯಾವುದು ಎಂಬ ಬಗ್ಗೆ ವಿವರವನ್ನು ಸಿಬಿಐ ಹೇಳಬೇಕಿದೆ.
ಅದಕ್ಕಾಗಿ ನನ್ನನ್ನು ಕರೆಸು ಮತ್ತು ನನ್ನಿಂದ ಮಾಹಿತಿಯನ್ನೂ ಪಡೆದಿಲ್ಲ. ಹೀಗಿರುವಾಗ ಶೇ. 90ರಷ್ಟು ತನಿಖೆ ಹೇಗೆ ಪೂರ್ಣಗೊಂಡಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ದುರುದ್ದೇಶ ಪೂರ್ವಕವಾಗಿ, ರಾಜಕೀಯ ಉದ್ದೇಶದಿಂದ ನನ್ನ ವಿರುದ್ಧ ತನಿಖೆಗೆ ಆದೇಶ ನೀಡಿದರು. ಆದರೆ, ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿಯಿಲ್ಲ ಎಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದೆ. ಈಗ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ನನಗೆ ನ್ಯಾಯಾಲಯದ ಮೇಲೆ ಗೌರವ, ನಂಬಿಕೆಯಿದೆ. ನನ್ನ ವಿರುದ್ಧ ಷಡ್ಯಂತ್ರಕ್ಕೆ ಸೂಕ್ತ ಸಂದರ್ಭದಲ್ಲಿ ಉತ್ತರ ನೀಡುತ್ತೇನೆ. ಎಲ್ಲದಕ್ಕೂ ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ ಎಂದಿದ್ದಾರೆ



