HomeCrime Newsದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಬೆಂಗಳೂರಿನಲ್ಲಿ ಸತೀಶ್ ಪಾತ್ರಿ ಬಂಧನ!

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಬೆಂಗಳೂರಿನಲ್ಲಿ ಸತೀಶ್ ಪಾತ್ರಿ ಬಂಧನ!

For Dai;y Updates Join Our whatsapp Group

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ. ನಗರದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಹಾಸನ ಮೂಲದ ಮಹಿಳೆಯೊಬ್ಬರಿಗೆ ದೆವ್ವ ಬಿಡಿಸುವುದಾಗಿ ನಂಬಿಸಿ, ಆರೋಪಿ ಸತೀಶ್ ಪಾತ್ರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿ ಪ್ರದೇಶಕ್ಕೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಸಂತ್ರಸ್ತ ಮಹಿಳೆ ಕೊಪ್ಪ ಹಾಗೂ ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು. ಮಹಿಳೆಯ ದೂರಿನ ಆಧಾರದ ಮೇಲೆ ಎನ್.ಆರ್. ಪುರ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಸತೀಶ್ ಪಾತ್ರಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದ ಕೊಪ್ಪ ಠಾಣೆ ಪೊಲೀಸರು ಕೊನೆಗೂ ಬೆಂಗಳೂರಿನ ಜೆ.ಪಿ. ನಗರದಲ್ಲಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇನ್ನು ಸತೀಶ್ ಪಾತ್ರಿ ವಿರುದ್ಧ ಈ ಹಿಂದೆಯೂ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಬಲವಂತವಾಗಿ ಕೋಳಿಯ ರಕ್ತ ಕುಡಿಯುವಂತೆ ಒತ್ತಾಯಿಸಿದ್ದಾನೆ ಎಂಬ ಆರೋಪ ಎದುರಾಗಿತ್ತು. ಈ ಘಟನೆಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಇದರ ನಡುವೆ ಆರೋಪಿ ಸತೀಶ್ ಪಾತ್ರಿಗೆ ಪೊಲೀಸ್ ಇಲಾಖೆಯೊಳಗಿನಿಂದಲೇ ಮಾಹಿತಿ ಸೋರಿಕೆಯಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಎಂಬಾತ ಪೊಲೀಸರ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿಯನ್ನು ಆರೋಪಿಗೆ ರವಾನಿಸುತ್ತಿದ್ದ ಎನ್ನಲಾಗಿದೆ.

ಪೊಲೀಸರು ದಾಳಿ ನಡೆಸಲು ಮುಂದಾಗುವ ಮೊದಲೇ ಆರೋಪಿಗೆ ಮಾಹಿತಿ ತಲುಪುತ್ತಿದ್ದು, ಇದರಿಂದ ಆತ ಪದೇಪದೇ ತನ್ನ ಅಡಗುತಾಣ ಬದಲಾಯಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಮಾಹಿತಿ ಸೋರಿಕೆ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಅವರು ಕರ್ತವ್ಯಲೋಪದ ಆರೋಪದ ಮೇಲೆ ಕಾನ್ಸ್‌ಟೇಬಲ್ ಕಾಂತೇಶ್ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ, ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಜೊತೆಗೆ ಪೊಲೀಸ್ ಮಾಹಿತಿಯ ಸೋರಿಕೆ ವಿಚಾರವೂ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಸತೀಶ್ ಪಾತ್ರಿ ಬಂಧನದ ಬೆನ್ನಲ್ಲೇ ಪ್ರಕರಣದ ಮುಂದಿನ ತನಿಖೆ ಮಹತ್ವ ಪಡೆದುಕೊಂಡಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img