HomeGadag Newsಅಲ್ಪಸಂಖ್ಯಾತರ ಜನಸಂಖ್ಯೆ ಆಧಾರದಲ್ಲಿ ಅನುದಾನ ನೀಡಿ: ಸಚಿವ ಯು.ಟಿ. ಖಾದರ್

ಅಲ್ಪಸಂಖ್ಯಾತರ ಜನಸಂಖ್ಯೆ ಆಧಾರದಲ್ಲಿ ಅನುದಾನ ನೀಡಿ: ಸಚಿವ ಯು.ಟಿ. ಖಾದರ್

For Dai;y Updates Join Our whatsapp Group

 

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಅನುದಾನ ಮಂಜೂರು ಮಾಡಿ, ಅರ್ಹ ಬಡ ಕುಟುಂಬಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಸ್ಲಂ ಸಮಿತಿ ಹಾಗೂ ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿ ವತಿಯಿಂದ ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಕುಟುಂಬಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅವರನ್ನು ಮುಖ್ಯವಾಹಿನಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಕೋಟ್ಯಂತರ ರೂಪಾಯಿ ಅನುದಾನ ಮೀಸಲಿಟ್ಟಿದ್ದರೂ ಜಿಲ್ಲೆಯ ಬಡ ಅಲ್ಪಸಂಖ್ಯಾತ ಕುಟುಂಬಗಳಿಗೆ ಯೋಜನೆಗಳ ಸಮರ್ಪಕ ಪ್ರಯೋಜನ ದೊರೆಯುತ್ತಿಲ್ಲ ಎಂದು ಮನವಿದಾರರು ಆರೋಪಿಸಿದ್ದಾರೆ.

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ಜಿಲ್ಲೆಯಲ್ಲಿ ಸಾವಿರಾರು ಬಡ ಅಲ್ಪಸಂಖ್ಯಾತ ಕುಟುಂಬಗಳು ಕಟ್ಟಡ ಕಾರ್ಮಿಕರು, ಹಮಾಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಸೇರಿದಂತೆ ವಿವಿಧ ಶ್ರಮಿಕ ವೃತ್ತಿಗಳಲ್ಲಿ ದುಡಿಯುತ್ತಿದ್ದಾರೆ. ಸ್ವಯಂ ಉದ್ಯೋಗ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಸರ್ಕಾರ ಸಹಾಯಧನ ಮತ್ತು ಸಬ್ಸಿಡಿ ನೀಡುತ್ತಿದ್ದರೂ ಅರ್ಹರಿಗೆ ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿಲ್ಲ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ, ಅರಿವು, ಮೈಕ್ರೊ ಸಾಲ, ಶ್ರಮಶಕ್ತಿ, ಭೂ ಒಡೆತನ ಹಾಗೂ ಪ್ರವಾಸಿ ಟ್ಯಾಕ್ಸಿ ಸೇರಿದಂತೆ ಹಲವು ಯೋಜನೆಗಳಿಗೆ ಪ್ರತಿವರ್ಷ ಅನುದಾನ ನೀಡಲಾಗುತ್ತಿದೆ. ಆದರೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬಡ ಕುಟುಂಬಗಳು ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಯೋಜನೆಗಳ ಅನುಷ್ಠಾನದಲ್ಲಿ ಮಧ್ಯವರ್ತಿಗಳ ಹಾವಳಿ ಹಾಗೂ ಕಮಿಷನ್ ಆಧಾರಿತ ವ್ಯವಸ್ಥೆ ಇದೆ ಎಂಬ ದೂರುಗಳಿದ್ದು, ಇದರಿಂದ ನಿಜವಾದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಲು ಜಿಲ್ಲೆಯಲ್ಲಿ ಮಾಹಿತಿ ಕೇಂದ್ರಗಳನ್ನು ಆರಂಭಿಸಲಾಗಿದ್ದರೂ, ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಸಮರ್ಪಕ ಮಾಹಿತಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದರಿಂದ ಅನೇಕ ಅರ್ಹ ಕುಟುಂಬಗಳು ಯೋಜನೆಗಳ ಪ್ರಯೋಜನದಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿಸಿದರು.

ಕಳೆದ 20 ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಕಾರ್ಯವೈಖರಿಯನ್ನೂ ಪರಿಶೀಲಿಸಿ, ಬಡ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ವಿಫಲರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿದಾರರು ಆಗ್ರಹಿಸಿದರು.

ಗದಗ ಜಿಲ್ಲಾ ಸ್ಲಂ ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮುಖಂಡರಾದ ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಪುಷ್ಪಾ ಬಿಜಾಪೂರ, ಇಬ್ರಾಹಿಂ ಮುಲ್ಲಾ, ಸಲೀಂ ಹರಿಹರ, ಸಾಕ್ರುಬಾಯಿ ಗೋಸಾವಿ, ಖಾಜಾಸಾಬ ಇಸ್ಮಾಯಿಲನವರ, ದಾದು ಗೋಸಾವಿ, ಮಕ್ತುಮಸಾಬ ಮುಲ್ಲಾನವರ, ಶಂಕ್ರಪ್ಪ ರೋಣದ, ಹುಸೇನ ಮುಲ್ಲಾನವರ, ನಜಮುನಿಸಾ ಮುರಗೋಡ ಸೇರಿದಂತೆ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದ್ದರೂ ಅದರ ಫಲ ನಿಜವಾದ ಬಡ ಅಲ್ಪಸಂಖ್ಯಾತ ಕುಟುಂಬಗಳಿಗೆ ತಲುಪದಿದ್ದರೆ ಯೋಜನೆಗಳ ಉದ್ದೇಶವೇ ವಿಫಲವಾಗುತ್ತದೆ. ಜನಸಂಖ್ಯೆ ಆಧಾರದಲ್ಲಿ ಅನುದಾನ ಹೆಚ್ಚಿಸಿ, ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ ಅರ್ಹರಿಗೆ ನೇರವಾಗಿ ಸೌಲಭ್ಯ ದೊರಕಿಸುವ ವ್ಯವಸ್ಥೆ ಮಾಡಬೇಕು.

— ಇಮ್ತಿಯಾಜ್ ಆರ್. ಮಾನ್ವಿ, ಅಧ್ಯಕ್ಷರು, ಗದಗ ಜಿಲ್ಲಾ ಸ್ಲಂ ಸಮಿತಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img