ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ (CJP) ಪ್ರತಿಭಟನೆ ಹಾಗೂ ಕಾಂಗ್ರೆಸ್ ನಾಯಕರ ಹೇಳಿಕೆಗಳ ವಿರುದ್ಧ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶ ವಿರೋಧಿ ಶಕ್ತಿಗಳು ಸಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈ ಪ್ರತಿಭಟನೆಗೆ ಕೇಂದ್ರ ಸರ್ಕಾರ ಹೆದರಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಜೆಪಿ ಹೆಸರಿನಲ್ಲಿ ನಡೆದಿರುವ ಪ್ರದರ್ಶನವನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಬದಿಗಿಟ್ಟು, ದೇಶ ವಿರೋಧಿ ಶಕ್ತಿಗಳು ಸಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ಹೋರಾಟ ನಡೆಸಿವೆ. ಈ ಎಲ್ಲ ಬೆಳವಣಿಗೆಗಳನ್ನೂ ಕೇಂದ್ರ ಸರ್ಕಾರ ಗಮನಿಸಿದೆ ಎಂದು ತಿಳಿಸಿದರು.
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರದ್ದು ಸಾಂವಿಧಾನಿಕ ಹುದ್ದೆಯಾಗಿದ್ದು, ಅವರಿಂದ ತಪ್ಪಾಗಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವವರು, ಅವರು ಮಾಡಿರುವ ತಪ್ಪೇನು ಎಂಬುದನ್ನು ಸ್ಪಷ್ಟವಾಗಿ ತೋರಿಸಬೇಕು. ಆದರೆ, ಈವರೆಗೆ ಅಂತಹ ತಪ್ಪನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಟೀಕಿಸಿದರು.
ನಟ ಪ್ರಕಾಶ್ ರಾಜ್ ಅವರು ಎಸ್‌ಐಆರ್ (SIR) ನಡೆಸಬಾರದು ಎಂದು ಹೇಳುತ್ತಿದ್ದಾರೆ. ಹಾಗಾದರೆ ಮೃತಪಟ್ಟವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಹಾಗೆಯೇ ಉಳಿಯಬೇಕೇ ಎಂದು ಪ್ರಶ್ನಿಸಿದ ಛಲವಾದಿ ನಾರಾಯಣಸ್ವಾಮಿ, ಭಯೋತ್ಪಾದಕರ ಹೆಸರುಗಳನ್ನು ಉಲ್ಲೇಖಿಸಿ ಮಾತನಾಡುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಾಲಯಗಳ ಮೇಲೆ ನಂಬಿಕೆ ಇಡದೆ ಬೀದಿಗಿಳಿದು ಪ್ರತಿಭಟನೆ ನಡೆಸುವುದು ಸರಿಯಲ್ಲ. ವಿಚ್ಛಿದ್ರಕಾರಿ ಶಕ್ತಿಗಳು ದೇಶದೊಳಗೆ ನುಸುಳಿ ಭಾರತವನ್ನು ಒಡೆಯುವ ಕೆಲಸದಲ್ಲಿ ತೊಡಗಿವೆ ಎಂದು ಅವರು ಆರೋಪಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳಿಗೂ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದರು. ಪ್ರಿಯಾಂಕ್ ಖರ್ಗೆ ಏನು ಬೇಕಾದರೂ ಮಾತನಾಡುತ್ತಾರೆ. ಅವರಿಗೆ ಅನುಭವದ ಕೊರತೆಯಿದೆ ಎಂದು ಟೀಕಿಸಿದರು.
‘ನನ್ನ ಶಕ್ತಿ ನನ್ನ ತಂದೆ’ ಎಂದು ಅವರು ಭಾವಿಸಬಾರದು ಎಂದ ಛಲವಾದಿ ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ ಅವರನ್ನು ತಮ್ಮ ಹಿರಿಯ ಸಹೋದರನಂತೆ ಭಾವಿಸುತ್ತೇನೆ ಎಂದು ಹೇಳಿದರು. ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ಕೊಲೆ ಪ್ರಕರಣಗಳ ಬಗ್ಗೆ ಪ್ರಿಯಾಂಕ್ ಖರ್ಗೆ ಗಮನಹರಿಸಿಲ್ಲ ಎಂದು ಆರೋಪಿಸಿದ ಅವರು, ಈ ವಿಚಾರಗಳತ್ತ ಗಮನ ಹರಿಸುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.



