ಬಳ್ಳಾರಿ: ನಗರದಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಸಾವಿಗೆ ಸಂಬಂಧಿಸಿದಂತೆ ರಾಜಕೀಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಬಿಜೆಪಿ ನಿಯೋಗ ರಾಜಶೇಖರ್ ಕುಟುಂಬಕ್ಕೆ ಭೇಟಿ ನೀಡಿ 10 ಲಕ್ಷ ರೂ. ಪರಿಹಾರವನ್ನು ನಗದು ಚೆಕ್ ರೂಪದಲ್ಲಿ ಹಸ್ತಾಂತರಿಸಿದೆ.
ಶನಿವಾರ ರಾಜಶೇಖರ್ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ನಾಯಕರು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಈ ಬಗ್ಗೆ ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ, “ರಾಜಶೇಖರ್ ಅವರ ಸಾವಿಗೆ ನ್ಯಾಯ ಒದಗಿಸುವುದು ನಮ್ಮ ಹೊಣೆ. ಕುಟುಂಬದ ನೋವಿಗೆ ಈ ಸಹಾಯಧನ ಕೇವಲ ತಾತ್ಕಾಲಿಕ ಪರಿಹಾರ. ನಿಜವಾದ ನ್ಯಾಯವೆಂದರೆ ನಿಷ್ಪಕ್ಷಪಾತ ತನಿಖೆ” ಎಂದು ಹೇಳಿದ್ದಾರೆ. ಜೊತೆಗೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಆಗ್ರಹವನ್ನು ಮುಂದಿಟ್ಟಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದಿದೆ, ಕಾಂಗ್ರೆಸ್ ಶಾಸಕರ ಗೂಂಡಾಗಿರಿ ವ್ಯಾಪಕವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಕರಣ ಇದೀಗ ರಾಜಕೀಯ ಮಟ್ಟದಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯುತ್ತಿದೆ.



