ನವದೆಹಲಿ: ಭಾರತದ ಜೊತೆಗಿನ ಕ್ರಿಕೆಟ್ ಸಂಬಂಧವನ್ನು ಮತ್ತೆ ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಬಾಂಗ್ಲಾದೇಶ ಪ್ರಯತ್ನ ಆರಂಭಿಸಿದೆ. ಉಭಯ ದೇಶಗಳ ನಡುವಿನ ಬಿಕ್ಕಟ್ಟನ್ನು ಬಗೆಹರಿಸಿ, ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಆಯೋಜಿಸುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್ ತಿಳಿಸಿದ್ದಾರೆ.
ಕ್ರಿಕೆಟ್ಗೆ ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಶೀಘ್ರವಾಗಿ ಪರಿಹರಿಸುವ ಉದ್ದೇಶ ಹೊಂದಿರುವುದಾಗಿ ಅಮೀನುಲ್ ಹಕ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ಅವರು ಭಾರತೀಯ ಹೈಕಮಿಷನರ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
“ಕ್ರಿಕೆಟ್ ಕುರಿತು ಮಾತುಕತೆ ನಡೆಯುತ್ತಿದೆ. ಕ್ರಿಕೆಟ್ ವಿಶ್ವಕಪ್ಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ತ್ವರಿತವಾಗಿ ಬಗೆಹರಿಸಲು ನಾವು ಬಯಸುತ್ತೇವೆ. ಭಾರತೀಯ ಹೈಕಮಿಷನರ್ ಅವರು ಪ್ರಧಾನಿಯನ್ನು ಭೇಟಿಯಾಗಿದ್ದಾರೆ. ವಿದೇಶಾಂಗ ಸಚಿವರು ಹಾಗೂ ರಾಜ್ಯ ಸಚಿವರೊಂದಿಗೂ ಮಾತುಕತೆ ನಡೆಸಲಾಗಿದೆ” ಎಂದು ಅಮೀನುಲ್ ಹಕ್ ಹೇಳಿದ್ದಾರೆ.
ಭಾರತ ತಂಡ 2025ರ ಆಗಸ್ಟ್ನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬೇಕಿತ್ತು. ಈ ಪ್ರವಾಸದಲ್ಲಿ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲು ವೇಳಾಪಟ್ಟಿ ನಿಗದಿಯಾಗಿತ್ತು. ಆದರೆ 2025ರ ಜುಲೈನಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟ ಹಿನ್ನೆಲೆಯಲ್ಲಿ ಸರಣಿಯನ್ನು ಮುಂದೂಡಲಾಗಿತ್ತು.
ಇದಾದ ಬಳಿಕ ಟಿ20 ವಿಶ್ವಕಪ್ನಲ್ಲಿ ಭಾಗವಹಿಸಲು ಬಾಂಗ್ಲಾದೇಶ ತಂಡ ಭಾರತಕ್ಕೆ ಆಗಮಿಸಿರಲಿಲ್ಲ. ಇದೀಗ ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧವನ್ನು ಮತ್ತೆ ಸುಧಾರಿಸುವ ಪ್ರಯತ್ನಗಳು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರತ-ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸರಣಿಗೆ ವೇದಿಕೆ ಸಿದ್ಧವಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.



