ಬಳ್ಳಾರಿ: ಜಿಲ್ಲೆಯ ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಸೀನ್ ಬಸಪ್ಪ ಕ್ಯಾಂಪಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಗಣಿಗಾರಿಕೆ ಲಾರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಸ್ಥಳದಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಹಾರಿದ ಕಿಡಿ ಸಮೀಪದಲ್ಲಿದ್ದ ಲಾರಿಯ ಡೀಸೆಲ್ ಟ್ಯಾಂಕ್‌ಗೆ ತಗುಲಿದೆ. ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ವೇಗವಾಗಿ ಹಬ್ಬಿ ಮೂರು ಲಾರಿಗಳನ್ನು ಆವರಿಸಿಕೊಂಡಿದೆ.
ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಲಾರಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು.
ಈ ಘಟನೆಯಲ್ಲಿ ಮೂವರು ಚಾಲಕರು ಹಾಗೂ ವೆಲ್ಡಿಂಗ್ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಸಂಡೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಗ್ನಿ ಅವಘಡದ ನಿಖರ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಪಾರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.



