ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಕೊನೆಗೂ ಜಾಮೀನು ದೊರೆತಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಕೆಲವು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಬಳಿಕ ಪೊಲೀಸರ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಬೈರತಿ ಬಸವರಾಜ್ ಫೆಬ್ರವರಿ 13ರಂದು ಬೆಂಗಳೂರಿಗೆ ಆಗಮಿಸುವ ವೇಳೆ ವಿಮಾನ ನಿಲ್ದಾಣದಲ್ಲೇ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.
ಈಗ ನ್ಯಾಯಾಲಯವು 2 ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಒದಗಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ತನ್ನ ವ್ಯಾಪ್ತಿಯನ್ನು ಬಿಟ್ಟು ಹೊರಗೆ ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.
2025ರ ಜುಲೈ 15ರಂದು ಹಲಸೂರು ಕೆರೆ ಸಮೀಪ ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಅವರನ್ನು ಕೊಲೆ ಮಾಡಲಾಗಿತ್ತು. ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಈ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಜಗದೀಶ್, ಕಿರಣ್, ವಿಮಲ್ ಮತ್ತು ಅನಿಲ್ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ.
ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದಲ್ಲಿ ಸಿಐಡಿ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.



