ವಿಜಯಸಾಕ್ಷಿ ಸುದ್ದಿ, ಗದಗ: ನೀಟ್ ಪರೀಕ್ಷೆ ಅಕ್ರಮ ಪ್ರಕರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರು ಕಾಂಗ್ರೆಸ್ ಮತ್ತು ಎಸ್ಎಫ್ಐ ನಡೆಸಿದ ಪ್ರತಿಭಟನೆ ಖಂಡಿಸಿ ಜಿಲ್ಲಾ ಬಿಜೆಪಿ ಘಟಕವು ಶುಕ್ರವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಭಾರಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಟಯರ್ಗೆ ಬೆಂಕಿ ಹಚ್ಚಲು ಯತ್ನಿಸಿದಾಗ ಪೊಲೀಸರು ತಡೆದರು.
ದೇಶವಿರೋಧಿ ಶಕ್ತಿಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ದೇಶದ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಳಕಪ್ಪ ಬಂಡಿ, ಪೊಲೀಸರ ಮೇಲೆ ಹಲ್ಲೆ ನಡೆಸುವವರನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲಾಗದು. ದೇಶದ ಭದ್ರತೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಮಾತನಾಡಿ, ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುವ ಮೂಲಕ ದೇಶದ ಭದ್ರತೆಗೆ ಧಕ್ಕೆ ತರುವ ವಾತಾವರಣ ನಿರ್ಮಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ದೇಶದಲ್ಲಿ ಗೊಂದಲ ಸೃಷ್ಟಿಸುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ ಮಾತನಾಡಿ, ಕಾಂಗ್ರೆಸ್ ದೇಶದಲ್ಲಿ ಅಶಾಂತಿ ಮತ್ತು ಗೊಂದಲದ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ ಸೇರಿದಂತೆ ಹಲವು ಮುಖಂಡರು ಮಾತನಾಡಿ, ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಅಶೋಕ ನವಲಗುಂದ, ಎಂ.ಎಂ. ಹಿರೇಮಠ, ವಿಜಯಕುಮಾರ ಗಡ್ಡಿ, ಜಯಶ್ರೀ ಉಗಲಾಟ, ಅರವಿಂದ ಹುಲ್ಲೂರ, ಶಿವರಾಜಗೌಡ ಹಿರೇಮನಿಪಾಟೀಲ, ಸೋಮು ಹುಡೇದಮನಿ, ವಿನಾಯಕ ಮಾನ್ವಿ, ಶಶಿಧರ ದಿಂಡೂರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಬಿಜೆಪಿ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
“ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಆದರೂ ಸುಖಾಸುಮ್ಮನೆ ಪ್ರತಿಭಟನೆ ನಡೆಸಿ ದೇಶದಲ್ಲಿ ಅರಾಜಕತೆ ಇದೆ ಎಂಬ ಭಾವನೆ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ.”
– ಕಳಕಪ್ಪ ಬಂಡಿ, ಮಾಜಿ ಸಚಿವ



