ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ವಿದೇಶಿ ನಾಯಕರ ಗೌರವಾರ್ಥ ಕೇಂದ್ರ ಸರ್ಕಾರ ಆಯೋಜಿಸಿದ್ದ ಭವ್ಯ ಔತಣಕೂಟ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಔತಣಕೂಟದಲ್ಲಿ ಎನ್ಡಿಎ ಮತ್ತು ಬಿಜೆಪಿ ಮಿತ್ರಪಕ್ಷಗಳ ಮುಖ್ಯಮಂತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರಿಂದ, ಇದು ಆಡಳಿತ ಪಕ್ಷದ ಕಾರ್ಯಕ್ರಮದಂತೆ ಬಿಂಬಿತವಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಅಧಿಕೃತ ಮೂಲಗಳು, ವಿರೋಧ ಪಕ್ಷಗಳ ಮುಖ್ಯಮಂತ್ರಿಗಳಿಗೂ ಔತಣಕೂಟಕ್ಕೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ ಕೆಲವರು ಅನಿವಾರ್ಯ ಕಾರಣಗಳಿಂದ ಗೈರಾಗಿದ್ದಾರೆ ಎಂದು ಸ್ಪಷ್ಟಪಡಿಸಿವೆ.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸೆಪ್ಟೆಂಬರ್ 12ರಂದು ಔತಣಕೂಟದ ಆಹ್ವಾನವನ್ನು ಸ್ವೀಕರಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅನಿವಾರ್ಯ ಕಾರಣಗಳನ್ನು ಉಲ್ಲೇಖಿಸಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದರು. ಕರ್ನಾಟಕ ಹಾಗೂ ಕೇರಳದ ಕಾಂಗ್ರೆಸ್ ಮುಖ್ಯಮಂತ್ರಿಗಳೂ ಔತಣಕೂಟದಿಂದ ದೂರ ಉಳಿದಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಅವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಔತಣಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಔತಣಕೂಟಕ್ಕೆ ಆಹ್ವಾನ ನೀಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಆಕ್ಷೇಪಿಸಿದೆ. ಕೇಂದ್ರ ಸರ್ಕಾರದ ರಾಜತಾಂತ್ರಿಕ ಧೋರಣೆಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಭಾರತದ ವಿವಿಧ ನಗರಗಳಲ್ಲಿ ಬ್ರಿಕ್ಸ್ ಸಭೆಗಳು ನಡೆದಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿತ್ತು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಷ್ಟ್ರೀಯ ಮಹತ್ವದ ಜಾಗತಿಕ ರಾಜತಾಂತ್ರಿಕ ಕಾರ್ಯಕ್ರಮದಿಂದ ವಿರೋಧ ಪಕ್ಷಗಳ ಮುಖಂಡರು ದೂರ ಉಳಿದಿರುವುದು ದುರದೃಷ್ಟಕರ ಎಂದೂ ಸರ್ಕಾರದ ಮೂಲಗಳು ಬೇಸರ ವ್ಯಕ್ತಪಡಿಸಿವೆ.
ಜಾಗತಿಕ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಹಾಗೂ ಆಡಳಿತಾತ್ಮಕ ಒಗ್ಗಟ್ಟನ್ನು ಪ್ರದರ್ಶಿಸುವ ಉದ್ದೇಶದಿಂದ ಎಲ್ಲಾ ರಾಜ್ಯಗಳ ನಾಯಕರನ್ನು ಒಟ್ಟಿಗೆ ಸೇರಿಸುವ ಪರಿಕಲ್ಪನೆಯೊಂದಿಗೆ ಆಹ್ವಾನ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ನಡುವೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿ ಬಹಿಷ್ಕರಿಸುತ್ತಾರೆ ಎಂಬ ಬಿಜೆಪಿ ಆರೋಪವೂ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.



