ಕೋಲಾರ: ಕ್ಯಾಂಟರ್ ವಾಹನ ಮತ್ತು ರಾಯಲ್ ಎನ್‌ಫೀಲ್ಡ್ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಸಮೀಪ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ಶಶಿ (25) ಹಾಗೂ ಬೆಂಗಳೂರು ನೆಲಮಂಗಲ ಮೂಲದ ತನುಷ್ (25) ಎಂದು ಗುರುತಿಸಲಾಗಿದೆ.
ಇಬ್ಬರೂ ಶುಕ್ರವಾರ ಬೆಳಗ್ಗೆ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಆಂಧ್ರ ಪ್ರದೇಶದ ಕಾಣಿಪಾಕಂ ಗಣಪತಿ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ವಾಹನದೊಂದಿಗೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.



