ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬಂಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಬ್ಬ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಟಿಪ್ಪರ್ ಲಾರಿ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೃತರನ್ನು ಮನೋಜ್, ನರಸಿಂಹಮೂರ್ತಿ, ನಂದೀಶ್ ಮತ್ತು ಅರುಣ್ ಎಂದು ಗುರುತಿಸಲಾಗಿದೆ. ಎಲ್ಲರೂ ಅಜ್ಜವಾರ ಗ್ರಾಮದ ನಿವಾಸಿಗಳಾಗಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಈ ದುರ್ಘಟನೆಯ ವಿಚಾರವನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಪ್ರದೀಪ್ ಈಶ್ವರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದರು. ನಂತರ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಪೈಕಿ ನರಸಿಂಹ ಅವರ ವಿವಾಹ ಕೆಲ ತಿಂಗಳ ಹಿಂದೆ ನಡೆದಿದ್ದು, ಮದುವೆಯಾದ ಆರು ತಿಂಗಳೊಳಗೇ ಅವರು ವಿಧಿಯಾಟಕ್ಕೆ ಗಂಡನನ್ನು ಕಳೆದುಕೊಂಡಿದ್ದಾರೆ.



