ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.
ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಹಾಗೂ ಉಪ ವಿಭಾಗದ ಪೊಲೀಸ್ ಅಧಿಕಾರಿ ಸತ್ಯನಾರಾಯಣ ರಾವ್ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ ಮತ್ತು ಪಿಎಸ್‌ಐ ಜಿ ಪಾಂಡುರಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ದಾಳಿಯ ವೇಳೆ ಆರೋಪಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ 791 ಗಾಂಜಾ ಗಿಡಗಳಿಂದ 187 ಕೆಜಿ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸಹ ಭಾಗವಹಿಸಿದ್ದರು.
ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದ ಪೊಲೀಸ್ ಸಿಬ್ಬಂದಿಗೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

