ಉಡುಪಿ: ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ ನೀಡಲಿದ್ದಾರೆ. ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನದಿಂದ ಸಂಜೆವರೆಗೆ ಅವರ ಭೇಟಿ ನಿಗದಿಯಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ತಮಿಳುನಾಡು ಮತ್ತು ಉಡುಪಿ ಪೊಲೀಸರು ಸೇರಿ ದೇವಸ್ಥಾನ ಹಾಗೂ ಸುತ್ತಮುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಸಿಎಂ ಭೇಟಿಯ ವೇಳೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಇರುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಭಕ್ತರು ಈ ಸಮಯದಲ್ಲಿ ದರ್ಶನಕ್ಕೆ ಬಾರದಂತೆ ಮನವಿ ಮಾಡಲಾಗಿದೆ.
ಇದೇ ವೇಳೆ ಮೇಕೆದಾಟು ಯೋಜನೆ ವಿಚಾರದಿಂದ ಉಂಟಾದ ವಿವಾದಗಳ ಹಿನ್ನೆಲೆ, ಕೆಲವು ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶನ ಮಾಡುವ ಸಾಧ್ಯತೆ ಇರುವುದರಿಂದ ಪ್ರಮುಖ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾಗಿದ್ದು, ರಾಜಕೀಯ ನಾಯಕರು ಹಾಗೂ ಗಣ್ಯರು ಆಗಾಗ ಭೇಟಿ ನೀಡುವ ಪವಿತ್ರ ಸ್ಥಳವಾಗಿದೆ.



