ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿ ರಾಜ್ಯದಲ್ಲಿ ಹೋಟೆಲ್ ಉದ್ಯಮ ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ.
ಶೂನ್ಯವೇಳೆಯಲ್ಲಿ ಸಿಲಿಂಡರ್ ಕೊರತೆ ಕುರಿತು ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ದು, ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾತಿಗೆ ಮಾತು ಬೆಳೆದ ಪರಿಣಾಮ ಸದನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸಿದರು.
ಕುಣಿಗಲ್ ಶಾಸಕ ಡಾ. ರಂಗನಾಥ್ ಸಿಲಿಂಡರ್ ಕೊರತೆ ವಿಚಾರವನ್ನು ಪ್ರಸ್ತಾಪಿಸಿ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸ್ಪೀಕರ್ ಆಹಾರ ಸಚಿವರಿಂದ ಉತ್ತರ ನೀಡುವಂತೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ಇಲ್ಲ. 25 ದಿನಕ್ಕೊಮ್ಮೆ ಗೃಹ ಬಳಕೆಯ ಸಿಲಿಂಡರ್ ನೀಡಲಾಗುತ್ತಿದೆ. ಅನಾವಶ್ಯಕವಾಗಿ ಹೆಚ್ಚಿನ ಖರ್ಚು ಮಾಡಿ ಸಿಲಿಂಡರ್ ಸಂಗ್ರಹಿಸಬಾರದು ಎಂದು ಹೇಳಿದರು.
ಈ ವೇಳೆ ರಂಗನಾಥ್ ಮರುಪ್ರಶ್ನೆ ಮಾಡಿದ್ದು, ವಾಣಿಜ್ಯ ಸಿಲಿಂಡರ್ ಪಡೆಯಲು ₹2000ಕ್ಕೂ ಹೆಚ್ಚು ಹಣ ಖರ್ಚಾಗುತ್ತಿದೆ. ಕೇಂದ್ರ ಸರ್ಕಾರ ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಆಧಾರವಿಲ್ಲದೆ ಆರೋಪ ಮಾಡಬಾರದು ಎಂದು ತಿರುಗೇಟು ನೀಡಿದರು.
ಈ ವೇಳೆ ಕಾಂಗ್ರೆಸ್ ಶಾಸಕರಿಂದಲೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಎಲ್‌ಪಿಜಿ ಸಿಲಿಂಡರ್ ಸಮಸ್ಯೆಯನ್ನು ಪರಿಹರಿಸುವುದು ಯಾರು? ಬಿಜೆಪಿ ನಾಯಕರು ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ಮೋದಿ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಸದನದಲ್ಲಿ ಮಾತಿನ ಚಕಮಕಿ ಮತ್ತಷ್ಟು ತೀವ್ರಗೊಂಡು ಗದ್ದಲದ ವಾತಾವರಣ ನಿರ್ಮಾಣವಾಯಿತು.



