ವಿಜಯಸಾಕ್ಷಿ ಸುದ್ದಿ, ಗದಗ: ಡಿಸೆಂಬರ್ ೨೯ರಂದು ಕರ್ನಾಟಕ ಲೋಕಸೇವಾ ಆಯೋಗವು ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು ೩೮೪ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರುಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಯಾವುದೇ ರೀತಿಯ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ ೨೯ರಂದು ಪರೀಕ್ಷೆಗಳು ಜರುಗುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿಸದಸ್ಯಸಮಿತಿಯನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದರು.
ಚಲನವಲನ ವೈಕಲ್ಯವುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್ ಚೇರ್/ಇಳಿಜಾರು ರ‍್ಯಾಂಪ್) ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ಪರಿಮಿತಿಯೊಳಗೆ ಡಿಸೆಂಬರ್ ೨೯ರಂದು ಬೆಳಿಗ್ಗೆ ೮ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಶೂ,ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳನ್ನು ಒಯ್ಯುವಂತಿಲ್ಲ. ವಸ್ತ್ರಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಅನುಸರಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಡಿಸೆಂಬರ್ ೨೯ರಂದು ಬೆ ೧೦ರಿಂದ ಮಧ್ಯಾಹ್ನ ೧೨ರವರೆಗೆ ಹಾಗೂ ಮಧ್ಯಾಹ್ನ ೨ರಿಂದ ೪ರವರೆಗೆ ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು ೩೮೪ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರುಪರೀಕ್ಷೆ ಜರುಗಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೫೪೪೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಸುಗಮವಾಗಿ ಜರುಗುವಂತೆ ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪರೀಕ್ಷಾ ಕೇಂದ್ರಗಳ ವಿವರ
ನಗರದ ಕೆ.ಎಲ್.ಇ ಸೊಸೈಟಿ ಜೆ.ಟಿ ಕಾಲೇಜ್, ಬಸವೇಶ್ವರ ಆರ್ಟ್ಸ ಮತ್ತು ಕಾಮರ್ಸ್ ಕಾಲೇಜು, ಶಾಸ್ತಿçÃಜಿ ಹೈಸ್ಕೂಲ್, ವಿ.ಡಿ.ಎಸ್.ಟಿ ಗಂಡುಮಕ್ಕಳ ಪ್ರೌಢಶಾಲೆ, ವಿ.ಡಿ.ಎಸ್.ಟಿ ಹೆಣ್ಣುಮಕ್ಕಳ ಸಂಯುಕ್ತ ಪಿ.ಯು. ಕಾಲೇಜು, ಸಿ.ಎಸ್. ಪಾಟೀಲ ಬಾಲಕಿಯರ ಪ್ರೌಢಶಾಲೆ, ಸಿ.ಎಸ್. ಪಾಟೀಲ ಬಾಲಕರ ಪ್ರೌಢಶಾಲೆ, ಲೊಯೊಲ ಹೈಸ್ಕೂಲ್, ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಪಿ.ಜಿ. ಸ್ಟಡಿ ಸೆಂಟರ್ ನರಸಾಪುರ, ಎಚ್.ಸಿ.ಇ.ಎಸ್ ಪದವಿಪೂರ್ವ ಕಾಲೇಜು, ಎ.ಎಸ್.ಎಸ್. ಕಾಮರ್ಸ್ ಕಾಲೇಜು, ತೋಂಟದಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್, ಗುರುಬಸವ ಇಂಗ್ಲೀಷ್ ಮಿಡಿಯಂ ಸ್ಕೂಲ್, ಸಿ.ಡಿ.ಓ ಜೈನ್ ಆಂಗ್ಲ ಮಾಧ್ಯಮ ಶಾಲೆ, ಜಿ.ಡಿ.ಶಾ. ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಶ್ರೀ ಮಹಾವೀರ ಜೈನ್ ಇಂಗ್ಲೀಷ್ ಮಿಡಿಯಂ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ.



