ಟಿ. ನರಸೀಪುರ: KSIC ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಟಿ. ನರಸೀಪುರದಲ್ಲಿ ಮಾತನಾಡಿದ ಅವರು, KSIC ಅನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಕೆಲವರು KSIC ಮುಚ್ಚಲಾಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು.
KSIC ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಇಂತಹ ಸಂಸ್ಥೆಯನ್ನು ಮುಚ್ಚುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ತಿಳಿಸಿದ್ದಾರೆ. ಅಧಿಕಾರಿಗಳು ವಿವಿಧ ಕಡೆ ಜಾಗ ಪರಿಶೀಲನೆ ನಡೆಸಿದ ಬಳಿಕ ಈ ಸ್ಥಳವೇ ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತ ಎಂದು ತಿಳಿಸಿರುವುದರಿಂದ ಇಲ್ಲಿ ಕ್ರೀಡಾಂಗಣ ನಿರ್ಮಿಸಲು ಮುಂದಾಗಿದ್ದೇವೆ ಎಂದು ಹೇಳಿದರು.
KSIC ನೌಕರರು ಅಥವಾ ಇನ್ನಿತರರಿಗೆ ಯಾವುದೇ ಅನುಮಾನ ಇದ್ದರೆ ಬಂದು ಚರ್ಚೆ ನಡೆಸಬಹುದು. ಕ್ರೀಡಾಂಗಣ ನಿರ್ಮಾಣವಾದರೆ ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಯಾರಿಗೂ ಗೊಂದಲ ಬೇಡ ಎಂದು ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.



