ವಿಜಯಸಾಕ್ಷಿ ಸುದ್ದಿ, ಧಾರವಾಡ: ಮತದಾರರ ಪಟ್ಟಿಯಲ್ಲಿ ಹೆಸರು, ತಂದೆ ಅಥವಾ ಪತಿಯ ಹೆಸರು, ವಯಸ್ಸು, ಫೋಟೊ ಸೇರಿದಂತೆ ಯಾವುದೇ ವಿವರಗಳಲ್ಲಿ ದೋಷಗಳಿದ್ದರೆ ಅವುಗಳನ್ನು ತಕ್ಷಣ ತಿದ್ದುಪಡಿ ಮಾಡಿಸಿಕೊಳ್ಳಬೇಕು. ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಿಳಾಸ ಬದಲಾದ ಮತದಾರರು ಹೊಸ ಮತಗಟ್ಟೆಗೆ ಹೆಸರು ಸ್ಥಳಾಂತರಿಸಲು ನಮೂನೆ–8 ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಹಾಗೂ ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆಯಬೇಕಾದವರು ನಮೂನೆ–6 ಮೂಲಕ ಅರ್ಜಿ ಸಲ್ಲಿಸಬೇಕು. ಮೃತಪಟ್ಟ ಮತದಾರರ ಮಾಹಿತಿಯನ್ನು ಕುಟುಂಬಸ್ಥರು ಸಂಬಂಧಿತ ಬಿಎಲ್ಒಗಳಿಗೆ ನೀಡಬೇಕು. ಮಾಹಿತಿ ಸಿಗದಿದ್ದರೆ ಪಂಚನಾಮೆ ಆಧರಿಸಿ ಹೆಸರು ಕೈಬಿಡಲಾಗುವುದು ಎಂದು ತಿಳಿಸಿದರು.
ಒಂದೇ ಕುಟುಂಬದ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಅನುಕ್ರಮವಾಗಿ ಇರುವಂತೆ ಕ್ರಮ ಕೈಗೊಳ್ಳಲು ಮತದಾರರ ನೋಂದಣಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ನಡೆಯುತ್ತಿದ್ದು, ರಾಜಕೀಯ ಪಕ್ಷಗಳು ಅಥವಾ ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆ, ದೂರು ಅಥವಾ ಸಮಸ್ಯೆಗಳಿದ್ದರೆ ಜಿಲ್ಲಾಡಳಿತಕ್ಕೆ ಲಿಖಿತವಾಗಿ ಸಲ್ಲಿಸಬೇಕು. ಅವುಗಳನ್ನು ತ್ವರಿತವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
“ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿದ್ದರೆ ನಮೂನೆ–8 ಮೂಲಕ ತಿದ್ದುಪಡಿ ಮಾಡಿಸಿಕೊಳ್ಳಿ. ಹೊಸ ಮತದಾರರು ನಮೂನೆ–6 ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು. ಯಾವುದೇ ದೂರುಗಳಿದ್ದರೆ ಜಿಲ್ಲಾಡಳಿತಕ್ಕೆ ಲಿಖಿತವಾಗಿ ನೀಡಿ.”
ಸ್ನೇಹಲ್ ಆರ್., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ, ಧಾರವಾಡ



