ವಿಜಯಸಾಕ್ಷಿ ಸುದ್ದಿ, ಧಾರವಾಡ: ಅಪ್ರಾಪ್ತ ಮಕ್ಕಳ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಶಾಲೆಗಳಲ್ಲಿ ‘ಒಳ್ಳೆಯ ಸ್ಪರ್ಶ–ಕೆಟ್ಟ ಸ್ಪರ್ಶ’ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಜಾಗೃತಿ ಕಾರ್ಯಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗುವ ಪ್ರಕರಣಗಳನ್ನು ತಡೆಗಟ್ಟಲು ಶಾಲೆ–ಕಾಲೇಜುಗಳಲ್ಲಿ ಪರಿಣಾಮಕಾರಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
18 ವರ್ಷದೊಳಗಿನ ಮಕ್ಕಳಿಗೆ ಬಾಲ್ಯವಿವಾಹ ಮಾಡಿಸುವುದು ಕಾನೂನುಬಾಹಿರವಾಗಿದ್ದರೂ ಇಂತಹ ಪ್ರಕರಣಗಳು ಕಂಡುಬರುತ್ತಿವೆ. ಅಪ್ರಾಪ್ತರು ಗರ್ಭಿಣಿಯಾಗಿರುವ ಪ್ರಕರಣಗಳು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕಂಡುಬಂದರೆ ವೈದ್ಯರು ತಕ್ಷಣ ಪೊಲೀಸ್ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಜೂನ್‌ವರೆಗೆ 6,714 ಪ್ರಕರಣಗಳು ದಾಖಲಾಗಿವೆ. ಎಲ್ಲ ಆಸ್ಪತ್ರೆಗಳಲ್ಲಿ ಅಗತ್ಯ ಚುಚ್ಚುಮದ್ದು ಲಭ್ಯವಿರುವಂತೆ ನೋಡಿಕೊಳ್ಳಬೇಕು ಹಾಗೂ ಬೀದಿ ನಾಯಿಗಳ ಸಂತಾನಹರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸೂಚಿಸಿದ ಅವರು, ಶಾಲೆ, ಕಾಲೇಜು, ಆಸ್ಪತ್ರೆ, ಸರ್ಕಾರಿ ಕಚೇರಿ, ರೈಲು ನಿಲ್ದಾಣ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



