ಹಾಸನ: ಪ್ರಸಿದ್ಧ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, 2026ರ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಹಾಸನ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಹಾಸನಾಂಬೆ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪೋಸ್ಟರ್ ಮತ್ತು ವೆಬ್ಸೈಟ್ ಬಿಡುಗಡೆ ಮಾಡಿದರು.
ಈ ಬಾರಿ ಹಾಸನಾಂಬೆ ದರ್ಶನಕ್ಕೆ ಆಗಮಿಸುವ ಸಾರ್ವಜನಿಕ ಭಕ್ತರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಕಳೆದ ವರ್ಷಗಳಂತೆ ಹೆಚ್ಚಿನ ಸಂಖ್ಯೆಯಲ್ಲಿ ಗಣ್ಯರಿಗೆ ಪಾಸ್ ನೀಡುವ ಬದಲು ಪಾಸ್ ವ್ಯವಸ್ಥೆಯನ್ನು ಅತ್ಯಂತ ಕಡಿಮೆ ಇರಿಸಲು ನಿರ್ಧರಿಸಲಾಗಿದೆ. ಗಣ್ಯರ ದರ್ಶನಕ್ಕೆ ಪ್ರತ್ಯೇಕ ಸಮಯ ನಿಗದಿ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಆರು-ಏಳು ಗಂಟೆಗಳ ಕಾಲ ಸರದಿಯಲ್ಲಿ ನಿಲ್ಲುವ ಸ್ಥಿತಿ ಭಕ್ತರಿಗೆ ಎದುರಾಗಬಾರದು ಎಂಬ ಉದ್ದೇಶದಿಂದ ವ್ಯವಸ್ಥೆ ರೂಪಿಸಲಾಗುತ್ತಿದೆ.
ಪುಟ್ಟ ಮಕ್ಕಳೊಂದಿಗೆ ಬರುವ ಮಹಿಳಾ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ಸರದಿ ಸಾಲು ಕಲ್ಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಈ ಬಾರಿ ಹಾಸನಾಂಬೆ ಉತ್ಸವವನ್ನು ಇಡೀ ಜಿಲ್ಲೆಯ ಜನರನ್ನು ಒಳಗೊಂಡ ಹಬ್ಬವಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ದನಗಳ ಜಾತ್ರೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ.



