ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ದಿನೇದಿನೇ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು.
ಮೆರವಣಿಗೆಗೂ ಮುನ್ನ ಪತ್ನಿ ಹಾಗೂ ಬಿಜೆಪಿ ಮುಖಂಡರೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು. ಬಳಿಕ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಭಾಗವಹಿಸಿದರು.
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಶ್ರೀನಿವಾಸ್ ಕರಿಯಪ್ಪ, ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಹಮಾಲಿ ಕಾರ್ಮಿಕನ ಮಗನೂ ವಿಧಾನಸಭೆಗೆ ಪ್ರವೇಶ ಮಾಡುವ ಕಾಲ ಬಂದಿದೆ” ಎಂದು ಹೇಳಿದರು.
ತಮ್ಮ ಎದುರಾಳಿಯಾಗಿ ಕಾಂಗ್ರೆಸ್ ಪಕ್ಷವನ್ನೇ ಗುರುತಿಸಿದ ಅವರು, ಬಿಜೆಪಿ ಈ ಬಾರಿ ಗೆಲುವು ಸಾಧಿಸಲಿದೆ ಎಂಬ ನಂಬಿಕೆ ವ್ಯಕ್ತಪಡಿಸಿದರು. ಬಿಜೆಪಿಗೆ ಮತದಾನ ಮಾಡಲು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉತ್ಸುಕರಾಗಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.



