ಗದಗ: ಮಳೆ ಕೊರತೆಯಿಂದ ಮುಂಗಾರು ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಗದಗ ವಿಧಾನಸಭಾ ಕ್ಷೇತ್ರದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಳೆಯ ಕೊರತೆಯಿಂದ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ತೀವ್ರ ಹೊಡೆತಕ್ಕೊಳಗಾಗಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿರುವ ರೈತರು ಬೆಳೆ ನಷ್ಟದ ಭೀತಿಯಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಗದಗ ಗ್ರಾಮೀಣ ಮಂಡಲ ಅಧ್ಯಕ್ಷ ಬೂದಪ್ಪ ಹಳ್ಳಿ, ಗದಗ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹೆಸರು, ಗೋವಿನಜೋಳ, ಹತ್ತಿ, ಈರುಳ್ಳಿ, ಸೋಯಾಬಿನ್, ಉದ್ದು ಹಾಗೂ ಶೇಂಗಾ ಸೇರಿದಂತೆ ವಿವಿಧ ಮುಂಗಾರು ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದರು. ಆದರೆ ನಿರೀಕ್ಷಿತ ಮಳೆ ಸುರಿಯದ ಪರಿಣಾಮ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೃಷಿ ಕಾರ್ಮಿಕರ ಕೂಲಿಗಾಗಿ ರೈತರು ಸಾವಿರಾರು ರೂಪಾಯಿ ವೆಚ್ಚ ಮಾಡಿದ್ದಾರೆ. ಸಾಲ ಮಾಡಿ ಕೃಷಿಯಲ್ಲಿ ಹಣ ಹೂಡಿದ ಅನೇಕ ರೈತರು ಈಗ ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಬೆಳೆ ಉಳಿಯದಿದ್ದರೆ ರೈತ ಕುಟುಂಬಗಳ ಬದುಕಿನ ಮೇಲೆಯೇ ಗಂಭೀರ ಪರಿಣಾಮ ಬೀಳಲಿದೆ ಎಂದು ಹೇಳಿದರು.
ಗದಗ ತಾಲೂಕಿನ ವಾಸ್ತವ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ವಿಳಂಬ ಮಾಡದೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಜೊತೆಗೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಿ ಅವರ ಬದುಕಿಗೆ ಆಸರೆಯಾಗಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಬಿಜೆಪಿ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ರೈತರ ಬೇಡಿಕೆಗಳಿಗೆ ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಸ್ಪಂದಿಸಬೇಕು. ಗದಗ ತಾಲೂಕಿನ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಸೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಾಗೂ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಕ್ಷದ ಹಿರಿಯ ಮುಖಂಡ ಎಂ.ಎಸ್. ಕರಿಗೌಡ್ರ ಸಂದರ್ಭೋಚಿತವಾಗಿ ಮಾತನಾಡಿದರು.
ಪ್ರತಿಭಟನೆಯಲ್ಲಿ ವಿವಿಧ ಮೋರ್ಚಾಗಳ ಜಿಲ್ಲಾ ಅಧ್ಯಕ್ಷರಾದ ಡಿ.ವೈ. ಹುನಗುಂದ, ವೈ.ಪಿ. ಅಡ್ನೂರ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಶಿರಹಟ್ಟಿ, ಅಶೋಕ ಬ್ಯಾಹಟ್ಟಿ, ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಜಿಲ್ಲಾ ಉಪಾಧ್ಯಕ್ಷರಾದ ನಿಂಗಪ್ಪ ಹುಗ್ಗಿ, ಶೇಖಣ್ಣ ಕನ್ಯಾಳ ಸೇರಿದಂತೆ ಪಕ್ಷದ ಪ್ರಮುಖರಾದ ಸಿದ್ದು ಪಲ್ಲೇದ, ಅಶೋಕ ಕರೂರ, ರವಿಕಾಂತ ಅಂಗಡಿ, ಡಿ.ಬಿ. ಕರೀಗೌಡ್ರ, ಅರವಿಂದ ಹುಲ್ಲೂರ, ನಾಗರಾಜ ಕುಲಕರ್ಣಿ, ನಾಗರಾಜ ಮದ್ನೂರ, ದಾವಲಸಾಬ ಅಣ್ಣಿಗೇರಿ, ರವಿ ವಗ್ಗನವರ, ಸೋಮರೆಡ್ಡಿ ನಡೂರ, ಸಿದ್ದಪ್ಪ ಜೊಂಡಿ, ವೆಂಕಟೇಶ ಸೂರಣಗಿ ಹಾಗೂ ಮಾಂತೇಶ ಬಾತಾಖಾನಿ ಉಪಸ್ಥಿತರಿದ್ದರು.
ರೈತ ಮೋರ್ಚಾ ಗ್ರಾಮೀಣ ಅಧ್ಯಕ್ಷ ನಿಂಗಯ್ಯ ಇಟಗಿಮಠ, ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಈರಗಾರ, ಪಕ್ಕಿರೇಶ ಗುಗ್ಗರಿ, ಮಂಜುನಾಥ ಮರಿಯಪ್ಪಗೌಡ್ರ, ನೀಲಪ್ಪ ಮಹಾಲಿಂಗಪುರ, ಶಂಕರ ಕರಿಬಿಷ್ಟಿ, ಈರಪ್ಪ ಹಡಪದ, ಮಲ್ಲಾರೆಪ್ಪ ಬೆಂತೂರ, ಅಪ್ಪು ನಮಸ್ತೆಮಠ, ಬಸವರಾಜ ಅಕ್ಕಿ, ವಿರೂಪಾಕ್ಷಪ್ಪ ಹಾದಿಮನಿ, ಅಲ್ಲಾಸಾಬ ಪಿರಕಾನವರ, ಮಂಜುನಾಥ, ವಿನೋದ ಹಂಸನೂರ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಳೆ ಕೈಕೊಟ್ಟು ರೈತರು ಕಂಗಾಲಾಗಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗಳು ಕಣ್ಣೆದುರೇ ಒಣಗುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಕೂಡಲೇ ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಇಲ್ಲವಾದರೆ ರೈತರೊಂದಿಗೆ ಸೇರಿ ಇನ್ನಷ್ಟು ತೀವ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ.
— ತೋಟಪ್ಪ (ರಾಜು) ಕುರುಡಗಿ, ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ



