ವಿಜಯಸಾಕ್ಷಿ ಸುದ್ದಿ, ಗದಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಆ.17ರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಎಚ್ಚರಿಸಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮಳೆಗಾಲದ ಅಧಿವೇಶನದ ಒಳಗೆ ಹಾಗೂ ಹೊರಗೆ ಹೋರಾಟ ಮುಂದುವರಿಸಲಾಗುವುದು ಎಂದರು.
ವಾಲ್ಮೀಕಿ ನಿಗಮದ ಸುಮಾರು ₹187 ಕೋಟಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದ ಅವರು, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹89 ಕೋಟಿ ಅಕ್ರಮ ನಡೆದಿದೆ ಎಂದು ಹೇಳಿದ್ದರು. ಹೀಗಿದ್ದರೂ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.
೩೧ ಪ್ರಕರಣಗಳ ತನಿಖೆ ನಡೆಯುತ್ತಿದ್ದರೂ ಮಂತ್ರಿಗಿರಿ ಏಕೆ?
ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಮಾತನಾಡಿ, ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ಹಣವನ್ನು ತೆಲಂಗಾಣದಲ್ಲಿ ಬಳಸಲಾಗಿದೆ ಎಂಬ ಶಂಕೆ ಇದೆ. ಸಿಬಿಐ, ಲೋಕಾಯುಕ್ತ, ಎಸ್‌ಐಟಿ ಹಾಗೂ ಸಿಐಡಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳಲ್ಲಿ ಒಟ್ಟು 31 ಪ್ರಕರಣಗಳು ತನಿಖೆಯ ಹಂತದಲ್ಲಿದ್ದರೂ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದೇಕೆ? ಎಂದು ಪ್ರಶ್ನಿಸಿದರು.
ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೂ ಪಾಲು ಇದೆಯೇ ಎಂಬ ಅನುಮಾನ ಮೂಡುತ್ತಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಎಸ್. ಕರಿಗೌಡ್ರ, ಲಿಂಗರಾಜಗೌಡ ಪಾಟೀಲ, ಶ್ರೀಪತಿ ಉಡುಪಿ, ಬೂದಪ್ಪ ಹಳ್ಳಿ, ಮಂಜುನಾಥ ಮುಳಗುಂದ, ನಾಗರಾಜ ತಳವಾರ, ಎಂ.ಎಂ. ಹಿರೇಮಠ ಹಾಗೂ ಅನಿಲ ಅಬ್ಬಿಗೇರಿ ಉಪಸ್ಥಿತರಿದ್ದರು.



