ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದಿದ್ದರೂ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳು ಇನ್ನೂ ಸಮರ್ಪಕವಾಗಿ ದೊರೆತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್ಓ ಗದಗ ಜಿಲ್ಲಾ ಘಟಕ ಆರೋಪಿಸಿವೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಗಳು, ವಿದ್ಯಾರ್ಥಿಗಳಿಗೆ ವಿತರಿಸಬೇಕಿರುವ ಶೂ ಮತ್ತು ಸಾಕ್ಸ್ ಇನ್ನೂ ಲಭ್ಯವಾಗಿಲ್ಲ. ಇದೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರವೇ ನೋಟ್‌ಬುಕ್‌ಗಳನ್ನು ಪೂರೈಸುವುದಾಗಿ ಘೋಷಿಸಿದ್ದರೂ, ಇದುವರೆಗೆ ಶಾಲೆಗಳಿಗೆ ನೋಟ್‌ಬುಕ್‌ಗಳು ತಲುಪಿಲ್ಲ ಎಂದು ದೂರಿವೆ.
ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿಗೆ ಸರ್ಕಾರ ನಿಗದಿಪಡಿಸಿರುವ ಅನುದಾನವು ಮಾರುಕಟ್ಟೆ ದರಕ್ಕಿಂತ ಕಡಿಮೆಯಿದ್ದು, ಹೆಚ್ಚುವರಿ ವೆಚ್ಚವನ್ನು ಶಿಕ್ಷಕರೇ ತಮ್ಮ ಜೇಬಿನಿಂದ ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕಾದ ಶಿಕ್ಷಣ ಸಚಿವರ ನೇಮಕವೂ ರಾಜ್ಯದಲ್ಲಿ ಇನ್ನೂ ಆಗಿಲ್ಲ ಎಂದು ಸಂಘಟನೆಗಳು ಟೀಕಿಸಿವೆ. ಶಿಕ್ಷಣದ ಬಗ್ಗೆ, ವಿಶೇಷವಾಗಿ ಬಡ ರೈತರು ಹಾಗೂ ಕಾರ್ಮಿಕರ ಮಕ್ಕಳು ವ್ಯಾಸಂಗ ಮಾಡುವ ಸರ್ಕಾರಿ ಶಾಲೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿವೆ.
ಕೂಡಲೇ ರಾಜ್ಯಕ್ಕೆ ಶಿಕ್ಷಣ ಸಚಿವರನ್ನು ನೇಮಿಸಿ, ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್‌ಬುಕ್ ಸೇರಿದಂತೆ ಎಲ್ಲ ಮೂಲ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು ಎಂದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಯವರನ್ನು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಮತ್ತು ಎಐಡಿಎಸ್ಓ ಆಗ್ರಹಿಸಿವೆ.
“ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು. ಶಿಕ್ಷಣ ಸಚಿವರನ್ನು ಶೀಘ್ರ ನೇಮಿಸಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು.”
– ಪ್ರೊ. ಎ. ಮುರಿಗೆಪ್ಪ, ರಾಜ್ಯಾಧ್ಯಕ್ಷರು, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ; ಎಂ. ಶಾಂತಿ, ಜಿಲ್ಲಾ ಸಂಚಾಲಕರು, ಎಐಡಿಎಸ್ಓ ಗದಗ ಜಿಲ್ಲೆ



