ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ೩೫ ವರ್ಷಗಳಿಂದ ಕೇವಲ ೩೦ ಹಾಸಿಗೆಗಳಲ್ಲೇ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಕನ್ನಡಪರ ಸಂಘಟನೆಗಳು ಹಾಗೂ ನಾಗರಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಲಕ್ಷ್ಮೇಶ್ವರಕ್ಕೆ ಆಗಮಿಸಿದ್ದ ಸಚಿವರಿಗೆ, ಪಟ್ಟಣದ ಸೋಮೇಶ್ವರ ದೇವಸ್ಥಾನ ಹಾಗೂ ದೂದಪೀರಾಂ ದರ್ಗಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು, ಆಸ್ಪತ್ರೆ ಮೇಲ್ದರ್ಜೆಗೇರಿಸುವ ವಿಚಾರಕ್ಕೆ ಮೊದಲ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಲಕ್ಷ್ಮೇಶ್ವರ ತಾಲೂಕು ಕೇಂದ್ರವಾಗಿ ಒಂಬತ್ತು ವರ್ಷ ಕಳೆದಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ೪೦೦ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಸುತ್ತಮುತ್ತಲಿನ ನಾಲ್ಕು ತಾಲೂಕುಗಳ ಜನರೂ ಆರೋಗ್ಯ ಸೇವೆಗಾಗಿ ಇಲ್ಲಿಗೆ ಅವಲಂಬಿತರಾಗಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ತಜ್ಞ ವೈದ್ಯರು, ಹಾಸಿಗೆಗಳು ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಗಂಭೀರ ಪ್ರಕರಣಗಳನ್ನು ಗದಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ದೂರದ ಆಸ್ಪತ್ರೆಗಳಿಗೆ ಕಳುಹಿಸುವ ಅನಿವಾರ್ಯತೆ ಎದುರಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಆಸ್ಪತ್ರೆಯನ್ನು ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಬೇಕು. ತಜ್ಞ ವೈದ್ಯರು ಹಾಗೂ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು. ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಹೆರಿಗೆ ಹಾಗೂ ಮಕ್ಕಳ ಚಿಕಿತ್ಸಾ ವಿಭಾಗಗಳನ್ನು ಬಲಪಡಿಸುವ ಮೂಲಕ ಲಕ್ಷ್ಮೇಶ್ವರದಲ್ಲೇ ಸಮರ್ಪಕ ಹಾಗೂ ಸುಸಜ್ಜಿತ ಆರೋಗ್ಯ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಹಾವೇರಿ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಯುವ ಮುಖಂಡ ಆನಂದ ಗಡ್ಡದೇವರಮಠ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಗದಗ ಜಿಲ್ಲಾಧ್ಯಕ್ಷ ಶರಣು ಗೋಡಿ ಅವರು ಆಸ್ಪತ್ರೆಯ ಅಗತ್ಯತೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಜೈನ ಸಮಾಜದ ಮುಖಂಡ ಪದ್ಮರಾಜ ಪಾಟೀಲ ಅವರು ಐತಿಹಾಸಿಕ ಶಂಖ ಬಸದಿ ಜೀರ್ಣೋದ್ಧಾರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಟಿ.ಈಶ್ವರ, ಎಸ್.ಪಿ.ಬಳಿಗಾರ, ಗುರುನಾಥ ದಾನಪ್ಪನವರ, ಜಿ.ವಿ.ಪಾಟೀಲ, ಮಹೇಶ ಲಮಾಣಿ, ದೀಪಕ ಲಮಾಣಿ, ರಾಜು ಪಾಟೀಲ, ಜಿ.ಆರ್.ಕೊಪ್ಪದ, ನಾಗರಾಜ ಮಡಿವಾಳರ, ಯಲ್ಲಪ್ಪ ತಳವಾರ, ರಾಜು ಕುಂಬಿ, ಅಂಬರೀಶ ತೆಂಬದಮನಿ, ವಿರೂಪಾಕ್ಷ ನಂದೆಣ್ಣವರ, ಸೋಮಣ್ಣ ಬೆಟಗೇರಿ, ಎಂ.ಎಂ.ಗಾಡಗೋಳಿ, ಮುತ್ತಣ್ಣ ಗಡೆಪ್ಪನವರ, ಪರಮೇಶ ಲಮಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ತಾಲೂಕು ಕೇಂದ್ರವಾಗಿ ಒಂಬತ್ತು ವರ್ಷ ಕಳೆದಿರುವ ಲಕ್ಷ್ಮೇಶ್ವರದಲ್ಲಿ ಜನಸಂಖ್ಯೆ ಹಾಗೂ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ೩೦ ಹಾಸಿಗೆಗಳ ವ್ಯವಸ್ಥೆಯಲ್ಲಿ ೪೦೦ಕ್ಕೂ ಹೆಚ್ಚು ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದು ಕಷ್ಟವಾಗಿದ್ದು, ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದು ಅತ್ಯಗತ್ಯವಾಗಿದೆ.
— ಆನಂದ ಗಡ್ಡದೇವರಮಠ, ಯುವ ಮುಖಂಡ



