ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ನಡೆದ ಲಾಬಿ, ಅಸಮಾಧಾನ ಹಾಗೂ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ವಿಜಯಪುರ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸಚಿವ ಎಂ.ಬಿ. ಪಾಟೀಲ್ ಕಾರಣ ಎಂಬ ಆರೋಪದ ಬೆನ್ನಲ್ಲೇ ಪಾಟೀಲ್ ನೇರವಾಗಿ ಸ್ಪಷ್ಟನೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬ ಅಂತಿಮ ತೀರ್ಮಾನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಸೇರಿದ್ದು ಎಂದು ಹೇಳಿದ್ದಾರೆ.
ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಬೇಕೆಂದು ತಾನೇ ಪಕ್ಷದ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾಗಿ ತಿಳಿಸಿರುವ ಪಾಟೀಲ್, ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ ಹಾಗೂ ರಾಹುಲ್ ಗಾಂಧಿ ಅವರು ಈ ಕುರಿತು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಶಾಸಕ ಸಿ.ಎಸ್. ನಾಡಗೌಡ ಮತ್ತು ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ತಪ್ಪಲು ತಾನೇ ಕಾರಣ ಎಂಬ ಆರೋಪಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಅವರು, ‘ಮತ್ತೊಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದೇ ನಾನು. ಆದರೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಸಚಿವ ಸ್ಥಾನ ತಪ್ಪಿಸಿದ್ದು ನಾನು ಎನ್ನುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಯಾಕೆ ಸಿಗಲಿಲ್ಲ ಎಂಬುದಕ್ಕೆ ತಮ್ಮನ್ನು ಹೊಣೆ ಮಾಡುವುದು ಸರಿಯಲ್ಲ ಎಂದಿರುವ ಅವರು, ಈ ಬಗ್ಗೆ ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು, ಸುರ್ಜೆವಾಲಾ ಹಾಗೂ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಬೇಕು ಎಂದು ಹೇಳಿದ್ದಾರೆ.
ಇನ್ನು ತಮ್ಮ ವಿರುದ್ಧ ಇಬ್ಬರು ಶಾಸಕರು ಮಾಡಿರುವ ಆರೋಪಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂಬ ವಿಚಾರಕ್ಕೂ ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
‘ಬಸವಣ್ಣನವರಿಗೆ ಬಿಟ್ಟಿಲ್ಲ ಇನ್ನೂ ಎಂ.ಬಿ. ಪಾಟೀಲ್ ಯಾವ ಲೆಕ್ಕ?’ ಎಂದು ಪ್ರಶ್ನಿಸುವ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿರುವ ಸಚಿವರು, ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ.



