ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಆರೋಪ ಪ್ರಕರಣವನ್ನು ರಾಜಕೀಯಗೊಳಿಸದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ದೇಣಿಗೆ ಕಳ್ಳತನ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರಿಗೆ ಈ ವಿಷಯವನ್ನು ರಾಜಕೀಯಗೊಳಿಸದಂತೆ ಪೀಠ ಸೂಚನೆ ನೀಡಿತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ವರದಿ ಪರಿಶೀಲಿಸಿದ ಪೀಠವು ಪ್ರಕರಣದ ತನಿಖೆ ಎಸ್ಐಟಿ ನಡೆಸುತ್ತಿದೆಯೇ ಎಂದು ಪ್ರಶ್ನಿಸಿತು.
ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, ಆರೋಪಗಳ ಸತ್ಯಾಸತ್ಯತೆ ಪತ್ತೆಹಚ್ಚಲು ಮೊದಲು ಎಸ್ಐಟಿ ತನಿಖೆ ನಡೆಸಿದ್ದು, ಇದೀಗ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದರು.
ಎಸ್ಐಟಿ ತನಿಖೆ ಮುಂದುವರಿಸಬಹುದಾಗಿದ್ದು, ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಎಸ್ಐಟಿಯನ್ನು ಪುನರ್ ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸ್ಥಿತಿಗತಿ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಮೂರರಿಂದ ನಾಲ್ಕು ದಿನಗಳ ಕಾಲಾವಕಾಶ ಬೇಕಿದ್ದು, ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ. ಬಳಿಕ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಪೀಠ ತಿಳಿಸಿದೆ.



