ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಶುಕ್ರವಾರ ಗದಗ ನಗರದ ತೆರಂಗಾ ಪಾರ್ಕ್ ನಲ್ಲಿ ಸಭೆ ನಡೆಸಿದರು.
ಲಕ್ಕುಂಡಿ ಗ್ರಾಮದಲ್ಲಿನ ಶಾಸನಗಳು, ಪ್ರಾಚ್ಯಾವಶೇಷಗಳ ಅನ್ವೇಷಣಾ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಾರ್ಯಕ್ರಮ ಯಶಸ್ವಿಗೆ ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದ ಸಚಿವರು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು. ಅನ್ವೇಷಣೆ ಕಾರ್ಯದಲ್ಲಿ ದೊರೆತ ಶಾಸನ, ಮೂರ್ತಿಗಳಿಗೆ ಯಾವುದೇ ತರಹದ ಹಾನಿಯಾಗದಂತೆ ಸುರಕ್ಷಿತವಾಗಿ ಒಂದೆಡೆ ಸಂಗ್ರಹಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಸಾಮಗ್ರಿ ಸಲಕರಣೆಗಳನ್ನು ಸಿದ್ಧಪಡಿಸಿಕೊಂಡು ಕಾರ್ಯಾಚರಣೆ ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದು ಪಾಟೀಲ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.



