ಬೆಂಗಳೂರು: ನಗರದ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮಂಗಳವಾರ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಫುಟ್‌ಪಾತ್ ಅತಿಕ್ರಮಣ ತೆರವು ಮಾಡಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಸ್ಥಳೀಯ ಸಂಘಟನೆಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಜೆಸಿಬಿ ಯಂತ್ರದ ಮೂಲಕ ಫುಟ್‌ಪಾತ್ ಮೇಲಿನ ಅಕ್ರಮ ನಿರ್ಮಾಣ ಹಾಗೂ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಪಾಲಿಕೆ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಕಾರ್ಯಾಚರಣೆಗೆ ಅಡ್ಡಿಪಡಿಸಿದರು ಎಂದು ಆರೋಪಿಸಲಾಗಿದೆ.
ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪಾಲಿಕೆ ಸಿಬ್ಬಂದಿಯೊಬ್ಬರ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಲು ಪ್ರಯತ್ನಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಬಳಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಹಲ್ಲೆ ಯತ್ನದ ಆರೋಪದ ಮೇರೆಗೆ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ವಿಚಾರಣೆ ನಡೆಸಲು ಪಾಲಿಕೆ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.



