ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗಿದೆ.
ಅಬಕಾರಿ ಇಲಾಖೆಯ ಅಕ್ರಮ ಲೈಸೆನ್ಸ್ ಹಂಚಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಪ್ರಭಾವ ಬಳಸಿ 18 ಬಾರ್ಗಳಿಗೆ ಅನಧಿಕೃತ ಲೈಸೆನ್ಸ್ ನೀಡಲು ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ಬಾವ ಹಾಗೂ ಅಬಕಾರಿ ಅಧಿಕಾರಿ ವೈ. ಮಂಜುನಾಥ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಈ ಹಿಂದೆ ED ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಅಕ್ರಮ ಹಣ ಹಾಗೂ ಹಲವು ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು ಎಂದು ತಿಳಿದುಬಂದಿದೆ.
ಅಲ್ಲದೆ, ವಿದೇಶದಲ್ಲಿ ಹಣ ಹೂಡಿಕೆ ಮಾಡಲು ಸತೀಶ್ ಜಾರಕಿಹೊಳಿ ನೆರವು ನೀಡಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಸುಮಾರು ₹3 ಕೋಟಿ ಮೌಲ್ಯದ ವಿದೇಶಿ ಹಣ ಪತ್ತೆಯಾಗಿತ್ತು ಎನ್ನಲಾಗಿದೆ.
ಬಾರ್ ಲೈಸೆನ್ಸ್ ನೀಡುವಿಕೆ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ವಿವಿಧೆಡೆ ED ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.



