ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಲವು ಸಚಿವಾಕಾಂಕ್ಷಿಗಳು ಹಾಗೂ ಹಿರಿಯ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದಾರೆ.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಶವಂತರಾಯಗೌಡ ಪಾಟೀಲ್, ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇದೆ ಎಂದು ಕರೆ ಮಾಡಿ ತಿಳಿಸಲಾಗಿತ್ತು. ಪ್ರಮಾಣವಚನಕ್ಕೆ ಸಿದ್ಧರಾಗುವಂತೆ ಹೇಳಿದ ಬಳಿಕ ಇದೀಗ ಅವಕಾಶ ಕೈತಪ್ಪಿಸಿರುವುದು ತೀವ್ರ ಬೇಸರ ತಂದಿದೆ ಎಂದು ಹೇಳಿದ್ದಾರೆ.
“ನನಗೆ ಈ ರಾಜಕೀಯ ವ್ಯವಸ್ಥೆಯೇ ಬೇಡ ಎನ್ನುವಂತಾಗಿದೆ. ನಿಷ್ಠಾವಂತರು ಮತ್ತು ಪ್ರಾಮಾಣಿಕರಿಗೆ ಇದು ಕಾಲವಲ್ಲ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ರಾಜೀನಾಮೆ ಪತ್ರ ಸಿದ್ಧಪಡಿಸಿದ್ದೇನೆ. ಇಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ.
ಇದೇ ವೇಳೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
“ಸಂಪುಟ ವಿಸ್ತರಣೆಯಲ್ಲಿಯೂ ಸಚಿವ ಸ್ಥಾನ ಸಿಗಲಿಲ್ಲ. ಹಿರಿತನ, ಅನುಭವ ಇರುವವರಿಗೆ ಅವಕಾಶ ನೀಡಿಲ್ಲ. ಮೂರು ಬಾರಿ ಶಾಸಕನಾಗಿದ್ದರೂ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಇದರಿಂದ ತುಂಬಾ ನೋವಾಗಿದೆ. ಬೆಂಬಲಿಗರು ಕಣ್ಣೀರಿಡುತ್ತಿದ್ದಾರೆ” ಎಂದು ಬೇಳೂರು ಗೋಪಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೊಸಬರಿಗೆ ಅವಕಾಶ ನೀಡುವುದಾಗಿ ಹೇಳಲಾಗಿತ್ತು. ಆದರೆ ಕೆಲವರನ್ನು ಹೊರತುಪಡಿಸಿದರೆ ಈಗಾಗಲೇ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
“ಬೇರೆ ಶಾಸಕರಿಗೆ ಅವಕಾಶವೇ ಸಿಕ್ಕಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಸಹಿಸಲು ಸಾಧ್ಯವಿಲ್ಲ. ಇದರಿಂದ ಪಕ್ಷಕ್ಕೂ ಹೊಡೆತ ಬೀಳಲಿದೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ಎರಡಕ್ಕೂ ರಾಜೀನಾಮೆ ನೀಡುತ್ತೇನೆ. ಮುಂದಿನ ನಡೆ ಬಗ್ಗೆ ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ” ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.



