ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಸಂಭವಿಸಿದೆ.
ಮೃತರನ್ನು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 150ಎರ ಹೆಗ್ಗೆರೆ ಭಾಗದಲ್ಲಿ ಈ ದುರ್ಘಟನೆ ನಡೆದಿದೆ.
ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಿಎಸ್ಐ ಈಶ್ವರ್ ಹಾಗೂ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯ ಪ್ರಕಾರ, ಎಲ್ಲರೂ ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ವೇಳೆ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಘಟನೆ ಬಗ್ಗೆ ಮಾಹಿತಿ ತಿಳಿದು ಐಮಂಗಲ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



