ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತ ಅಂತಿಮ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಸುಮಾರು 20 ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಹೈಕಮಾಂಡ್ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದು, ಈ ಸಂಬಂಧ ಮಹತ್ವದ ಸಭೆ ನಡೆಯುವ ನಿರೀಕ್ಷೆಯಿದೆ.
ಇದೇ ವೇಳೆ, ಜುಲೈ 18ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳಲಿದ್ದಾರೆ. ಅಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಚರ್ಚೆ ನಡೆಸುವ ಸಾಧ್ಯತೆ ಇದೆ.
ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಒಪ್ಪಿಗೆ ದೊರೆತರೆ ಜುಲೈ 19 ಅಥವಾ 20ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ ಹಾಗೂ ಯಾವ ಶಾಸಕರಿಗೆ ಅವಕಾಶ ದೊರೆಯಲಿದೆ ಎಂಬುದು ಅಂತಿಮ ಪಟ್ಟಿಯ ಬಳಿಕ ಸ್ಪಷ್ಟವಾಗಲಿದೆ.
ಸಚಿವ ಸಂಪುಟ ವಿಸ್ತರಣೆ ಕುರಿತ ಕಾಂಗ್ರೆಸ್ ಹೈಕಮಾಂಡ್ನ ತೀರ್ಮಾನ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಚಿವಾಕಾಂಕ್ಷಿಗಳು ದೆಹಲಿಯ ಬೆಳವಣಿಗೆಗಳತ್ತ ಚಿತ್ತ ಹರಿಸಿದ್ದಾರೆ.



