ಮಂಗಳೂರು:- ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಮು ದ್ವೇಷ, ಮಹಿಳೆಯರ ಘನತೆಗೆ ಧಕ್ಕೆ ತರುವ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆ ಈಶ್ವರಿ ಪದ್ಮುಂಜ ಎಂಬುವರ ದೂರು ಆಧರಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290, 302, ಹಾಗೂ 3(5) ಕಲಂ ಅಡಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್, ಧಾರ್ಮಿಕ ದ್ವೇಷ, ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿರುವುದಾಗಿ ಆರೋಪ ಕೇಳಿಬಂದಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದೇನು?
‘ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದಳು. ಅವಳು 6 ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಕೇಳಿದ್ರಾ? ಕೇಳುವ ‘ಧೈರ್ಯವೂ ಇಲ್ಲ. ಎರಡನೇಯದಾಗಿ ಅವರು ಹೇಳ್ತಾರೆ, ಅದು ಅಲ್ಲಾಹನಿಗೋಸ್ಕರ. ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು’.
ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ ಏನು ಹೇಳ್ತಿವಿ ಅಲ್ಲಿ ಹಿಂದೂ ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ಹಿಂದೂಗಳು 90 ಸಾವಿರ ಇರೋದು. ಗೆಲ್ಲೊದು ಯಾವಾಗ? ಅದು ಎಲ್ಲಾ ಕಡೆಗೂ ಹತ್ತಿರ ಹತ್ತಿರ ಬರ್ತಾ ಉಂಟು. ನಾವು ಗೆಲ್ತೇವಾ? ಗೆಲ್ಲಲು ಸಾಧ್ಯವೇ ಇಲ್ಲ. ನಮ್ಮನ್ನು ಸರ್ವನಾಶ ಮಾಡ್ತಾರೆ. ಹಾಗಾಗಿ ನಮ್ಮ ಮನೆಯಲ್ಲಿ 3 ಕ್ಕಿಂತ ಕಡಿಮೆ ಮಕ್ಕಳು ಇರಬಾರದು’ ಎಂದು ಹೇಳಿದ್ದರು.



