ಚಾಮರಾಜನಗರ: ಮನೆಯಲ್ಲಿ ಗ್ರೈಂಡರ್ ಮುಟ್ಟಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟಮ್ಮ ಮತ್ತು ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ವೇಳೆ ತಾಯಿ ಗ್ರೈಂಡರ್ ಬಳಸುತ್ತಿದ್ದರು. ಈ ಸಂದರ್ಭದಲ್ಲಿ ಬಾಲಕಿ ಗ್ರೈಂಡರ್ ಅನ್ನು ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ತೀವ್ರ ಶಾಕ್ ಹೊಡೆದಿದೆ ಎನ್ನಲಾಗಿದೆ.
ವಿದ್ಯುತ್ ಶಾಕ್‌ನಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಕೂಡಲೇ ಪೋಷಕರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ತಂದೆ-ತಾಯಿಯ ಕಣ್ಮುಂದೆಯೇ ಮಗಳು ಮೃತಪಟ್ಟಿರುವುದು ಕುಟುಂಬವನ್ನು ತೀವ್ರ ದುಃಖಕ್ಕೆ ದೂಡಿದೆ. ಗ್ರಾಮದಲ್ಲಿಯೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



