HomeDharwadರೈತರ ಬಗ್ಗೆ ಕಳಕಳಿ ಇರಲಿ : ಸಂತೋಷ ಲಾಡ್

ರೈತರ ಬಗ್ಗೆ ಕಳಕಳಿ ಇರಲಿ : ಸಂತೋಷ ಲಾಡ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಕೆಡಿಪಿ ಸಭೆಯು ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆದ್ಯತೆಯ ಮೇಲೆ ಚರ್ಚೆ ಆಗಬೇಕು. ಅಧಿಕಾರಿಗಳು ಸಭೆಗೆ ಅಪೂರ್ಣ ಮಾಹಿತಿ ತಂದರೆ, ಸಭೆಯ ಉದ್ದೇಶ ಈಡೆರುವುದಿಲ್ಲ. ರೈತರ ಬಗ್ಗೆ, ಬಡವರ ಬಗ್ಗೆ ಕಳಕಳಿ ಇರಬೇಕು.

ಅಧಿಕಾರಿಗಳು ಜವಾಬ್ದರಿಯಿಂದ ಸಭೆಗೆ ಸರಿಯಾದ ಮಾಹಿತಿ ಮತ್ತು ಉತ್ತರ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಎಚ್ಚರಿಕೆ ನೀಡಿದರು.

ಅವರು ಗುರುವಾರ ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2024-25ನೇ ಸಾಲಿನ ಜೂನ್ ಅಂತ್ಯಕ್ಕೆ ಕೊನೆಗೊಂಡ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ, ಮಾರುಕಟ್ಟೆ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ, ನೀರಾವರಿ ಇಲಾಖೆಗಳ ಅಧಿಕಾರಿಗಳು ಕೆಡಿಪಿ ಸಭೆಗೆ ಪೂರ್ಣ ಮಾಹಿತಿಯೊಂದಿಗೆ ಬರಬೇಕು. ವಾಸ್ತವಿಕ ವರದಿ ನೀಡುವದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಎಲ್ & ಟಿ ಕಂಪನಿಯಿಂದ ಜಲ ಜೀವನ ಮಿಷನ್ ಯೋಜನೆ ತೃಪ್ತಿಕರವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ನಿಗದಿತ ಅವಧಿಯಲ್ಲಿ ಯೋಜನೆ ಮುಗಿಸದಿದ್ದರೆ ಮತ್ತು ಪ್ರತಿ ಹಂತದ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದಿದ್ದರೆ ಕಂಪನಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತ್ರೊಳ್ಳಿ ಮಾತನಾಡಿ, ಹೆಸರು, ಗೋವಿನ ಜೋಳ, ಉದ್ದು ಸೇರಿ ವಿವಿಧ ಬೆಳೆಗಳ ಕಟಾವು ನಡೆದಿದೆ. ಹಿಂಗಾರಿಗೆ ಅಗತ್ಯ ಬೀಜ, ರಸಗೊಬ್ಬರ ದಾಸ್ತಾನು ಇದೆ ಎಂದು ಸಭೆಗೆ ತಿಳಿಸಿದರು.

G. Quarterly KDP meeting

ಉಪ ನಿರ್ದೇಶಕ ಡಾ. ರವಿ ಸಾಲಿಗೌಡರ ಮಾತನಾಡಿ, ಇಲಾಖೆ ಯೋಜನೆಗಳು ಪ್ರಗತಿಯಲ್ಲಿವೆ. ಪಶುಪಾಲನೆಯ ಹೆಚ್ಚಳಕ್ಕೆ ಅಗತ್ಯ ಜನಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.

ಆಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 249 ಗ್ರಾಮಗಳಲ್ಲಿ ನೀರು ಸರಬರಾಜು ವ್ಯವಸ್ಥೆಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ. ಉಳಿದ ಗ್ರಾ.ಪಂ ನೀರು ಸರಬರಾಜು ವ್ಯವಸ್ಥೆ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಇಂಜಿನಿಯರ್ ಜಗದೀಶ ತಿಳಿಸಿದರು.

ರಾಜ್ಯ ಸರಕಾರವು ಜಿಲ್ಲೆಗೆ 8 ಅಲ್ಪಸಂಖ್ಯಾತರ ಹಾಗೂ 14 ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ಮಂಜೂರಿ ಮಾಡಿದ್ದು, ಶೀಘ್ರವೇ ವಸತಿ ನಿಲಯಗಳ ಆರಂಭಕ್ಕೆ ಕ್ರಮ ವಹಿಸುವಂತೆ ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನುಗಳನ್ನು ಗುರುತಿಸಿ ಅವುಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಕೆರೆ, ಗೋಮಾಳ ಅತಿಕ್ರಮಣ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಶಾಸಕರಾದ ಎನ್.ಎಚ್. ಕೋನರಡ್ಡಿ, ಎಂ.ಆರ್. ಪಾಟೀಲ ಮಾತನಾಡಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಗ್ಯಾರಂಟಿ ಯೋಜನಾ ಪ್ರಾಧಿಕಾರದ ಬೆಳಗಾವಿ ವಿಭಾಗದ ಅಧ್ಯಕ್ಷ ಎಸ್.ಆರ್. ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿ ಇದ್ದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲ ಅಭಿಯಂತರ ಆರ್.ಎಂ. ಸೊಪ್ಪಿಮಠ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪ್ರಶಾಂತ ಪಾಟೀಲ, ಜಿ.ಪಂ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರದಲ್ಲಿ ರೈತರ ನೋಂದಣಿ ಆರಂಭವಾಗಿದ್ದು, ಸುಮಾರು 3 ಸಾವಿರ ರೈತರು ತಮ್ಮ ಹೆಸರು ನೋಂದಾಯಿಸಿದ್ದಾರೆ. ನೋಂದಣಿ ಪ್ರಗತಿಯಲ್ಲಿದೆ. ಹವಾಮಾನ ವೈಪರಿತ್ಯದಿಂದಾಗಿ ಹೆಸರುಕಾಳುಗಳಲ್ಲಿ ತೇವಾಂಶ ಇದೆ. ಗ್ರೇಡಿಂಗ್ ಬಂದ ತಕ್ಷಣ ಖರೀದಿ ಆರಂಭಿಸಲಾಗುತ್ತದೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಉಪ ನಿರ್ದೇಶಕ ಲಮಾಣಿ ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!