ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಗಳು ಸಂಪೂರ್ಣ ಸನ್ನದ್ಧವಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚಿಸಿದ್ದು, ಇದೇ ವೇಳೆ ಬರ ನಿರ್ವಹಣೆ ಕುರಿತ ರಾಜ್ಯಮಟ್ಟದ ವಿಡಿಯೊ ಸಂವಾದದಲ್ಲಿ ಗದಗ ಜಿಲ್ಲೆಯಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿದ್ದನ್ನು ವಿಶೇಷವಾಗಿ ಪ್ರಶಂಸಿಸಿದರು.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮೂರು ಗಂಟೆಗಳಿಗೂ ಅಧಿಕ ಕಾಲ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಗದಗ ಜಿಲ್ಲೆಯಿಂದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಬರ ನಿರ್ವಹಣೆ ಕುರಿತು ಪ್ರತಿಯೊಬ್ಬ ಅಧಿಕಾರಿಗೂ ಸಮಗ್ರ ಅರಿವು ಇರಬೇಕು. ಅದಕ್ಕಾಗಿ ಇಂತಹ ಸಮನ್ವಯ ಸಭೆಗಳು ಅತ್ಯಂತ ಮಹತ್ವದ್ದಾಗಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬರದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ಆದ್ಯತೆ ನೀಡಬೇಕು. ಜಲಾಶಯಗಳ ನೀರಿನ ಮಟ್ಟ, ಬೆಳೆ ಪರಿಸ್ಥಿತಿ ಹಾಗೂ ಅಂತರ್ಜಲ ಮಟ್ಟದ ಮಾಹಿತಿಯನ್ನು ನಿಯಮಿತವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರದ ಕಾರಣ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಗ್ರಾಮೀಣ ಪ್ರದೇಶದಲ್ಲಿ ವಿಬಿ-ಜಿ ರಾಮ್‌ಜಿ ಯೋಜನೆ ಅಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೂಚಿಸಿದರು.
ಸಭೆಯಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಡಿಸಿಎಫ್ ಸಂತೋಷ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲೆಯ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.



